ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅತೃಪ್ತರನ್ನು ಸೆಳೆದ ರೀತಿಯಲ್ಲಿ ಲೋಕಸಭೆ ಚುನಾವಣೆಯಲ್ಲೂ ಬಿಜೆಪಿ ಟಿಕೆಟ್ ವಂಚಿತರನ್ನು ಸೆಳೆಯಲು ಕಾಂಗ್ರೆಸ್ ಕಾರ್ಯತಂತ್ರ ರೂಪಿಸಿದೆ.
ಟಿಕೆಟ್ ವಂಚಿತ ಬಿಜೆಪಿ ನಾಯಕರ ಸೆಳೆದು ಕೇಸರಿ ಪಡೆಗೆ ಆಘಾತ ನೀಡಲು ಪ್ಲಾನ್ ಮಾಡಿಕೊಳ್ಳಲಾಗಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ವಂಚಿತರಾಗಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಮತ್ತು ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರನ್ನು ಕಾಂಗ್ರೆಸ್ ಸೆಳೆದು ಬಿಜೆಪಿ ಲಿಂಗಾಯಿತ ವಿರೋಧಿ ಎಂದು ದೊಡ್ಡ ಮಟ್ಟದಲ್ಲಿ ಅಭಿಪ್ರಾಯ ಮೂಡಿಸಿತ್ತು. ಶೆಟ್ಟರ್ ಸೋತರೂ ಮಾಜಿ ಮುಖ್ಯಮಂತ್ರಿಯೊಬ್ಬರು ಬಿಜೆಪಿ ತೊರೆದಿದ್ದು ಕಾಂಗ್ರೆಸ್ ಗೆ ಅನುಕೂಲವೇ ಆಗಿತ್ತು.
ಅದೇ ಮಾದರಿಯಲ್ಲಿ ಈ ಬಾರಿ ಬಿಜೆಪಿ ಟಿಕೆಟ್ ವಂಚಿತ ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ, ಸಂಸದ ಸಂಗಣ್ಣ ಕರಡಿ, ಮಾಜಿ ಸಚಿವರಾದ ಜೆ.ಸಿ. ಮಾಧುಸ್ವಾಮಿ ಮತ್ತು ಎಂ.ಪಿ. ರೇಣುಕಾಚಾರ್ಯ ಅವರನ್ನು ಕಾಂಗ್ರೆಸ್ ಗೆ ಸೆಳೆಯಲು ಕಾರ್ಯತಂತ್ರ ರೂಪಿಸಲಾಗಿದೆ ಎಂದು ಹೇಳಲಾಗಿದೆ.