ಬೆಂಗಳೂರು: ರಾಜ್ಯದ 20 ಲೋಕಸಭೆ ಕ್ಷೇತ್ರಗಳ ಅಭ್ಯರ್ಥಿಗಳನ್ನೊಳಗೊಂಡ ಬಿಜೆಪಿ ಎರಡನೇ ಪಟ್ಟಿ ಬಿಡುಗಡೆ ಮಾಡಲಾಗಿದೆ.
ಮೈಸೂರು ಲೋಕಸಭಾ ಕ್ಷೇತ್ರದಿಂದ ಯದುವೀರ್ ಒಡೆಯರ್ ಅವರಿಗೆ ಟಿಕೆಟ್ ನೀಡಲಾಗಿದ್ದು, ಹಾಲಿ ಸಂಸದ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಕೈತಪ್ಪಿದೆ. ದಕ್ಷಿಣ ಕನ್ನಡದಿಂದ ಬಿಜೆಪಿ ನಿಕಟ ಪೂರ್ವ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರಿಗೆ ಟಿಕೆಟ್ ಕೈತಪ್ಪಿದ್ದು, ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಟಿಕೆಟ್ ನೀಡಲಾಗಿದೆ. ದಾವಣಗೆರೆಯ ಹಾಲಿ ಸಂಸದ ಜಿ.ಎಂ. ಸಿದ್ದೇಶ್ವರ ಅವರ ಬದಲಿಗೆ ಅವರ ಪತ್ನಿ ಗಾಯತ್ರಿ ಸಿದ್ದೇಶ್ವರ ಅವರಿಗೆ ಟಿಕೆಟ್ ನೀಡಲಾಗಿದೆ.
ಚಾಮರಾಜನಗರ ಸಂಸದ ಶ್ರೀನಿವಾಸ ಪ್ರಸಾದ್, ತುಮಕೂರು ಸಂಸದ ಬಸವರಾಜ್ ಅವರು ಸ್ಪರ್ಧಿಸದಿರಲು ತೀರ್ಮಾನ ಕೈಗೊಂಡ ಹಿನ್ನೆಲೆಯಲ್ಲಿ ಚಾಮರಾಜನಗರ ಕ್ಷೇತ್ರದಿಂದ ಎಸ್. ಬಾಲರಾಜ್ ಅವರಿಗೆ ಟಿಕೆಟ್ ನೀಡಲಾಗಿದೆ. ತುಮಕೂರು ಲೋಕಸಭಾ ಕ್ಷೇತ್ರದಿಂದ ವಿ. ಸೋಮಣ್ಣ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ.
ಕೊಪ್ಪಳ ಲೋಕಸಭಾ ಕ್ಷೇತ್ರ ಸಂಸದ ಕರಡಿ ಸಂಗಣ್ಣ ಅವರಿಗೆ ಟಿಕೆಟ್ ಕೈತಪ್ಪಿದೆ. ಡಾ. ಬಸವರಾಜ ಕ್ಯಾವತ್ತೂರು ಅವರನ್ನು ಅಭ್ಯರ್ಥಿಯಾಗಿ ಘೋಷಿಸಲಾಗಿದೆ. ಹಾವೇರಿಯಿಂದ ಶಿವಕುಮಾರ್ ಉದಾಸಿ ಸ್ಪರ್ಧೆಯಿಂದ ಹಿಂದೆ ಸರಿದ ಹಿನ್ನೆಲೆಯಲ್ಲಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅಭ್ಯರ್ಥಿಯಾಗಿದ್ದಾರೆ.
ಉಡುಪಿ -ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದ್ದು, ಈ ಕ್ಷೇತ್ರದ ಸಂಸದರಾಗಿದ್ದ ಶೋಭಾ ಕರಂದ್ಲಾಜೆ ಅವರಿಗೆ ಬೆಂಗಳೂರು ಉತ್ತರ ಕ್ಷೇತ್ರದ ಟಿಕೆಟ್ ನೀಡಲಾಗಿದೆ. ಬೆಂಗಳೂರು ಉತ್ತರ ಸಂಸದ ಸದಾನಂದಗೌಡರಿಗೆ ಟಿಕೆಟ್ ಕೈತಪ್ಪಿದೆ.
ಬಳ್ಳಾರಿ ಹಾಲಿ ಸಂಸದ ದೇವೇಂದ್ರಪ್ಪ ಬದಲಿಗೆ ಬಿ. ಶ್ರೀರಾಮುಲು ಅವರಿಗೆ ಟಿಕೆಟ್ ನೀಡಲಾಗಿದೆ.