ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೊದಲ ಹಂತದ ಮತದಾನಕ್ಕೆ ಕೇವಲ ಮೂರು ದಿನ ಮಾತ್ರ ಬಾಕಿ ಇದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಟ್ಟೆಚ್ಚರ ಕೈಗೊಳ್ಳಲಾಗಿದೆ.
ಈ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ಪೊಲೀಸ್ ಆಯುಕ್ತ ಬಿ.ದಯಾನಂದ್, ಸಿಲಿಕಾನ್ ಸಿಟಿಯಲ್ಲಿ ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಸೆಂಟ್ರಲ್ ಹಾಗೂ ಬೆಂಗಳೂರು ಗ್ರಾಮಾಂತರ ಒಟ್ಟು 5 ಲೋಕಸಭಾ ಕ್ಷೇತ್ರಗಳಿವೆ. ಚಿಕ್ಕಬಳ್ಳಾಪುರ ಲೋಕಸಭ ಕ್ಷೇತ್ರಕ್ಕೆ ಬೆಂಗಳೂರಿನ ಕೆಲ ಏರಿಯಗಳು ಸೇರ್ಪಡೆಗೊಂಡಿವೆ. ಏಪ್ರಿಲ್ 26ರಂದು ನಡೆಯಲಿರುವ ಮೊದಲ ಹಂತದ ಮತದಾನ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ನಾಳೆ ಸಂಜೆಯಿಂದಲೇ ನಿಷೇಧಾಜ್ಞೆ ಜಾರಿಯಾಗಲಿದೆ. ಮತದಾನಕ್ಕೆ 48 ಗಂಟೆಗಳ ಮೊದಲು ಮದ್ಯ ಮಾರಾಟ ನಿಷೇಧಿಸಲಾಗುತ್ತಿದೆ ಎಂದರು.
ನಗರ ಪೊಲೀಸ್ ಘಟಕದಿಂದ 9397 ಪೊಲೀಸ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. 3,919 ಗೃಹ ರಕ್ಷಕ ಸಿಬ್ಬಂದಿ, 54 ಸಶಸ್ತ್ರ ತುಕಡಿ ಹಾಗೂ 11 ಕೇಂದ್ರೀಯ ಪೊಲೀಸ್ ತುಕಡಿ ನಿಯೋಜಿಸಲಾಗಿದೆ. ಏಪ್ರಿಲ್ 26ರಂದು ಮೊದಲ ಹಂತದ ಮತದಾನ ನಡೆಯಲಿದ್ದು, ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ.
ಹಣ ಹಂಚಿಕೆ, ಮತದಾರರಿಗೆ ಆಮಿಷವೊಡ್ಡುವ ಕೆಲಸ ಮಾಡುವಂತಿಲ್ಲ. ಮತದಾರರ ಮೇಲೆ ಪ್ರಭಾವ ಬೀರುವ ಚಟುವಟಿಕೆಗಳ ಮೇಲೆ ನಿಗಾ ವಹಿಸಲಾಗಿದೆ ಎಂದು ತಿಳಿಸಿದರು.