ಹಾಸನ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಆದರೆ ಬಿಜೆಪಿ ಮುಖಂಡರೊಬ್ಬರು ಜೆಡಿಎಸ್ ವಿರುದ್ಧವೇ ತಿರುಗಿ ಬಿದ್ದಿದ್ದಾರೆ.
ಹಾಸನ ಬಿಜೆಪಿ ಮುಖಂಡ ದೇವರಾಜೇಗೌಡ, ಲೋಕಸಭಾ ಚುನಾವಣೆಯಲ್ಲಿ ನಾನು ಹೆಚ್.ಡಿ.ದೇವೇಗೌಡರ ಕುಟುಂಬದ ವಿರುದ್ಧ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ದೇವೇಗೌಡರ ಕುಟುಂಬದ ಯಾರೇ ಅಭ್ಯರ್ಥಿಯಾಗಲಿ ಅವರ ವಿರುದ್ಧ ನಾನು ಸ್ಪರ್ಧೆ ಮಾಡುತ್ತೇನೆ ಎಂದು ತಿಳಿಸಿದ್ದಾರೆ.
ಸಂಸದ ಪ್ರಜ್ವಲ್ ರೇವಣ್ಣ ಅವರನ್ನು 6 ವರ್ಷ ಅನರ್ಹಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಆದರೆ ಅವರು ಮೇಲ್ಮನವಿ ಸಲ್ಲಿಸಿ ಜಿಲ್ಲೆಯಲ್ಲಿ ಪ್ರವಾಸ ಮುಂದುವರೆಸಿದ್ದಾರೆ. ಹಾಸನದಿಂದ ನಾನೇ ಅಭ್ಯರ್ಥಿ ಎನ್ನುತ್ತಿದ್ದಾರೆ. ದೇವೇಗೌಡರು ಇದಕ್ಕೆ ಧ್ವನಿಗೂಡಿಸುತ್ತಿದ್ದಾರೆ. ಇದು ನಮ್ಮ ಬಿಜೆಪಿಯ ಪ್ರಾಮಾಣಿಕ ಕಾರ್ಯಕರ್ತರ ದಾರಿ ತಪ್ಪಿಸುವ ಕೆಲಸವಾಗಿದೆ ಎಂದು ಕಿಡಿಕಾರಿದರು.
ಮೈತ್ರಿ ಬಳಿಕವೂ ಹಾಸನದಲ್ಲಿ ದೇವರಾಜೇಗೌಡ ಹಾಗೂ ಹೆಚ್.ಡಿ.ದೇವೇಗೌದರ ಕುಟುಂಬದ ನಡುವಿನ ಅಸಮಾಧಾನ ಮಾತ್ರ ಮುಂದುವರೆದಿದೆ.