ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿಯಲ್ಲಿ 4 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಪಹಣಿಯಲ್ಲಿ ವಾರಸುದಾರರ ಹೆಸರು ಸೇರ್ಪಡೆಗಾಗಿ ಲಂಚ ಪಡೆಯುತ್ತಿದ್ದ ಕಂದಾಯ ನಿರೀಕ್ಷಕ ಜೆ.ಎಸ್. ದಿನೇಶ್ ಲೋಕಾಯುಕ್ತ ಬಲೆಗೆ ಬಿದ್ದವರು. ಅಜ್ಜಿ ಮೃತಪಟ್ಟ ಹಿನ್ನೆಲೆಯಲ್ಲಿ ಅವರ ಹೆಸರಿನಲ್ಲಿದ್ದ ಆಸ್ತಿಯ ಪಹಣಿಯಲ್ಲಿ ವಾರಸುದಾರರ ಹೆಸರು ಸೇರ್ಪಡೆಗೊಳಿಸಲು ಕಳೆದ ವರ್ಷ ಮುಲ್ಕಿ ತಾಲೂಕು ತಹಶೀಲ್ದಾರ್ ಕಚೇರಿಗೆ ದೂರುದಾರ ಅರ್ಜಿ ಸಲ್ಲಿಸಿದ್ದು, ಅಲ್ಲಿಂದ ಕಂದಾಯ ನಿರೀಕ್ಷರ ಕಚೇರಿಗೆ ಅರ್ಜಿ ವಿಚಾರಣೆಗೆ ಕಳುಹಿಸಲಾಗಿದೆ. ಒಂದು ವರ್ಷಕ್ಕೂ ಹೆಚ್ಚು ಕಾಲ ಯಾವುದೇ ಕ್ರಮ ಕೈಗೊಳ್ಳದೆ, ಅರ್ಜಿಯನ್ನು ವಿಲೇವಾರಿ ಮಾಡದೆ ದಿನೇಶ್ ಉಳಿಸಿಕೊಂಡಿದ್ದರು.
ಈ ಸಂಬಂಧ ದೂರುದಾರ ವಿಚಾರಿಸಿದಾಗ ಪಹಣಿಯಲ್ಲಿ ವಾರಸುದಾರರ ಹೆಸರು ಸೇರ್ಪಡೆಗೆ 4 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಇದರಿಂದ ನೊಂದ ದೂರ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದು, ಸುರತ್ಕಲ್ ಜಂಕ್ಷನ್ ಬಳಿ ದೂರುದಾರನಿಂದ 4 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗಲೇ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು ದಿನೇಶ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಮಂಗಳೂರು ವಿಭಾಗದ ಲೋಕಾಯುಕ್ತ ಎಸ್ಪಿ ಎಂ.ಎ. ನಟರಾಜ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಡಾ. ಗಾನ ಪಿ. ಕುಮಾರ್, ನಿರೀಕ್ಷಕರಾದ ಅಮಾನುಲ್ಲಾ, ಸುರೇಶ್ ಕುಮಾರ್ ಪಿ.. ಚಂದ್ರಶೇಖರ್ ಕೆ.ಎನ್. ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.