alex Certify ಬೆಳ್ಳಂಬೆಳಗ್ಗೆ 12 ಜಿಲ್ಲೆಗಳಲ್ಲಿ ಭ್ರಷ್ಟರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ: ಏಕಕಾಲಕ್ಕೆ ದಾಳಿ, ಪರಿಶೀಲನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಳ್ಳಂಬೆಳಗ್ಗೆ 12 ಜಿಲ್ಲೆಗಳಲ್ಲಿ ಭ್ರಷ್ಟರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ: ಏಕಕಾಲಕ್ಕೆ ದಾಳಿ, ಪರಿಶೀಲನೆ

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಲೋಕಾಯುಕ್ತ ಪೊಲೀಸರು ಭ್ರಷ್ಟ ಮನೆ ಬಾಗಿಲು ಬಡಿದಿದ್ದಾರೆ. ಬೆಳಗಿನ ಜಾವವೇ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿ ಸೇರಿ ಸಂಬಂಧಿತ ಸ್ಥಳಗಳಲ್ಲಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರಿನ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೆಆರ್ ಪುರಂ ತಹಸಿಲ್ದಾರ್ ಅಜಿತ್ ರೈ ಮನೆ ಮೇಲೆ ದಾಳಿ ನಡೆಸಲಾಗಿದೆ. ಅಜಿತ್ ರೈ ಅವರ ಮನೆ ಸೇರಿ 10 ಕಡೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಖಲೆ ಪರಿಶೀಲನೆ ನಡೆಸಲಾಗಿದೆ. ಮನೆಯಲ್ಲಿ ಲಕ್ಷಾಂತರ ರೂಪಾಯಿ ನಗದು ಪತ್ತೆಯಾಗಿದೆ. ಅಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

ರಾಮನಗರ ದಾಳಿ ನಡೆಸಲಾಗಿದೆ. ಕೃಷಿ ಇಲಾಖೆ ಜಂಟಿ ನಿರ್ದೇಶಕ ರವಿ ನಿವಾಸದಲ್ಲಿ ಪರಿಶೀಲನೆ ನಡೆಸಲಾಗಿದೆ.

ಕೋಲಾರ ನಗರದ ಹಲವು ಕಡೆ ಲೋಕಾಯುಕ್ತ ದಾಳಿ ನಡೆದಿದೆ. ತುಮಕೂರಿನಲ್ಲಿ ಕ್ರೆಡಿಲ್ ಎಇಇ ಆಗಿರುವ ಕೋದಂಡರಾಮಯ್ಯ ಅವರ ಕೋಲಾರ ನಗರದ ಕುವೆಂಪು ನಗರದ ಮನೆ ಸೇರಿ ಐದು ಕಡೆ ದಾಳಿ ನಡೆಸಲಾಗಿದೆ.

ಯಾದಗಿರಿಯಲ್ಲಿ ಪಿಡಬ್ಲ್ಯೂಡಿ ಅಧಿಕಾರಿ ವಿಶ್ವನಾಥ ರೆಡ್ಡಿ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಗ್ರೀನ್ ಸಿಟಿಯಲ್ಲಿರುವ ನಿವಾಸದಲ್ಲಿ ವಿಶ್ವನಾಥ ರೆಡ್ಡಿ ನಿದ್ದೆ ಮಂಪರಿನಲ್ಲಿದ್ದಾಗಲೇ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ಬೆಳಗಿನ ಜಾವ ಐದು ಗಂಟೆಗೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ. ವಿಶ್ವನಾಥ ರೆಡ್ಡಿ ನಿವಾಸದಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಲೋಕಾಯುಕ್ತ ಡಿವೈಎಸ್ಪಿ ಇಸ್ಮಾಯಿಲ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

ಕಲ್ಬುರ್ಗಿ ನಗರದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಲಬುರ್ಗಿ ನಗರ, ಗ್ರಾಮೀಣ ಘಟಕ ಸಹಾಯಕ ನಿರ್ದೇಶಕ ಶರಣಪ್ಪ ಮಡಿವಾಳ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ರಾಯಚೂರು ಜಿಲ್ಲೆ ಸಿಂಧನೂರಿನಲ್ಲಿ ಅವರು ಕಾರ್ಯನಿರ್ವಹಿಸುತ್ತಿದ್ದು, ಕಲಬುರ್ಗಿ ತಾಲೂಕಿನ ಕಣದಾಳ ಗ್ರಾಮದ ಸಮೀಪದ ಫಾರ್ಮ್ ಹೌಸ್ ರಾಯಚೂರು ಜಿಲ್ಲೆ ಸಿಂಧನೂರಿನಲ್ಲಿರುವ ಕಚೇರಿ ಮತ್ತು ಬಾಡಿಗೆ ಮನೆ ಮೇಲೆ ದಾಳಿ ನಡೆಸಲಾಗಿದೆ. ಅಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಮನೆಗಳು ಕಚೇರಿ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ನಾಲ್ಕು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಚಿಕ್ಕಮಗಳೂರು ಜಿಲ್ಲಾ ನಿರ್ಮಿತಿ ಕೇಂದ್ರಗಳ ಯೋಜನಾ ವ್ಯವಸ್ಥಾಪಕ ಗಂಗಾಧರ್ ಅವರ ಚಿಕ್ಕಮಗಳೂರಿನ ಜಯನಗರದಲ್ಲಿರುವ ಮನೆ ಮೇಲೆ ದಾಳಿ ಮಾಡಲಾಗಿದೆ. ಗಂಗಾಧರ ನಿವಾಸ, ಹೋಟೆಲ್, ಪೆಟ್ರೋಲ್ ಬಂಕ್ ಮೇಲೆ ದಾಳಿ ಮಾಡಲಾಗಿದೆ. ನಿರ್ಮಿತಿ ಕೇಂದ್ರದ ಕಚೇರಿಯಲ್ಲಿಯೂ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಅಧಿಕಾರ ದುರುಪಯೋಗ ಮಾಡಿ ಅಕ್ರಮವಾಗಿ ಹಣ ಸಂಪಾದನೆ ಮಾಡಿದ ಆರೋಪ ಹಿನ್ನೆಲೆಯಲ್ಲಿ ಗಂಗಾಧರ್ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ ಹಿನ್ನೆಲೆಯಲ್ಲಿ ದಾಳಿ ಲೋಕಾಯುಕ್ತ ಡಿವೈಎಸ್ಪಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿಯೂ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಗೌರಿಬಿದನೂರು ನಗರದ ಬೈಪಾಸ್ ರಸ್ತೆ ಬಳಿ ಇರುವ ರಮೇಶ್ ಅವರಿಗೆ ಸೇರಿದ ಮನೆ, ಬೆಂಗಳೂರಿನ ಯಲಹಂಕ, ನಾಗರಬಾವಿ ಮನೆಗಳಲ್ಲಿ ದಾಖಲೆ ಪರಿಶೀಲನೆ ನಡೆಸಲಾಗಿದೆ. ಅಕ್ರಮ ಆಸ್ತಿಗಳಿಕೆ ಆರೋಪ ಹಿನ್ನೆಲೆಯಲ್ಲಿ ರಮೇಶ್ ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲಾ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ಮಾಡಿದ್ದಾರೆ.

ವಿಜಯಪುರ ಜಿಲ್ಲೆಯ ನಾಲ್ಕು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲೋಕೋಪಯೋಗಿ ಇಲಾಖೆ ಎಇಇ ಭೀಮನಗೌಡ ಬೀರದಾರ ಮತ್ತು ಅವರ ಸಂಬಂಧಿ ಶ್ರೀಕಾಂತ ಅಂಗಡಿ ನಿವಾಸದ ಮೇಲೆ ಬೆಳ್ಳಂಬೆಳಗ್ಗೆ ದಾಳಿ ನಡೆಸಲಾಗಿದೆ. ಬಸವನ ಬಾಗೇವಾಡಿ ವಿಭಾಗದಲ್ಲಿ ಪ್ರಭಾರಿ ಆಗಿ ಭೀಮನಗೌಡ ಕಾರ್ಯನಿರ್ವಹಿಸುತ್ತಿದ್ದಾರೆ. ವಿಜಯಪುರ ನಗರದ ಆರ್‌ಟಿಓ ಕಚೇರಿ ಹಿಂಭಾಗದಲ್ಲಿರುವ ನಿವಾಸದಲ್ಲಿ ಪರಿಶೀಲನೆ ನಡೆಸಲಾಗಿದೆ.

ವಿಜಯಪುರ ಜಿಲ್ಲೆ ತಾಳಿಕೋಟೆ ತಾಲೂಕಿನ ಸಾಸನೂರು ಗ್ರಾಮದಲ್ಲಿರುವ ಮುದ್ದೇಬಿಹಾಳ ವಿಭಾಗದ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಸಹಾಯಕ ಎಇ ಜೆ.ಪಿ. ಶೆಟ್ಟಿ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಲೋಕಾಯುಕ್ತ ಎಸ್ಪಿ ಅನಿತಾ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ.

ಬಾಗಲಕೋಟೆಯಲ್ಲಿ ಕೃಷಿ ಇಲಾಖೆ ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಚೇತನಾ ಪಾಟೀಲ ನಿವಾಸ, ಬೀಳಗಿ ಸಹಾಯಕ ಕೃಷಿ ನಿರ್ದೇಶಕ ಕೃಷ್ಣ ಶಿರೂರು ನಿವಾಸದ ಮೇಲೆ ದಾಳಿ ಮಾಡಲಾಗಿದೆ.

ಕೊಡಗು ಜಿಲ್ಲೆಯಲ್ಲಿ ಎಫ್.ಡಿ.ಸಿ. ಬಶೀರ್ ಮನೆ ಮೇಲೆ ದಾಳಿ ನಡೆಸಲಾಗಿದೆ. ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿ ಬಶೀರ್ ಅವರಿಗೆ ಸೇರಿದ ಕುಶಾಲನಗರದ ಗೊಂದಿಬಸವನಹಳ್ಳಿಯಲ್ಲಿರುವ ನಿವಾಸದ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಲಾಗಿದೆ.

ಬೆಳಗಾವಿ ನಗರದಲ್ಲಿಯೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವಿಜಯನಗರ ಜಿಲ್ಲೆಯ ಹರಪನಹಳ್ಳಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಶೇಖರ್ ಬಹುರೂಪಿ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಬೆಳಗಾವಿ ರಾಮತೀರ್ಥ ನಗರದಲ್ಲಿರುವ ಮನೆ ಸೇರಿ ಹಲವು ಕಡೆ ಪರಿಶೀಲನೆ ನಡೆಸಲಾಗಿದೆ. ಅವರು 2019 ರಲ್ಲಿ ಅಮಾನತುಗೊಂಡಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...