ದಾವಣಗೆರೆ: ದಾವಣಗೆರೆ ನಗರ ಯೋಜನಾ ಪ್ರಾಧಿಕಾರದ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಇಬ್ಬರು ಸಿಬ್ಬಂದಿ 2 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಯೋಜನಾ ಪ್ರಾಧಿಕಾರದ ಸಹಾಯಕ ನಿರ್ದೇಶಕ ಕೆ.ಆರ್. ಮಂಜು, ನಗರ ಯೋಜನಾಧಿಕಾರಿ ಭರತ್ ಲೋಕಾಯುಕ್ತ ಬಲೆಗೆ ಬಿದ್ದವರು ಎಂದು ಹೇಳಲಾಗಿದೆ.
ಖಾಸಗಿ ಲೇಔಟ್ ನಿರ್ಮಾಣಕ್ಕೆ ಪರವಾನಿಗೆ ನೀಡಲು 3 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಕೊಂಡಜ್ಜಿ ಗ್ರಾಮದಲ್ಲಿ ಶ್ರೀನಿವಾಸ್ ಎಂಬುವವರು ಖಾಸಗಿ ಲೇಔಟ್ ನಿರ್ಮಾಣ ಮಾಡುತ್ತಿದ್ದಾರೆ.
ಇದಕ್ಕೆ ಅನುಮತಿ ನೀಡಲು ಶ್ರೀನಿವಾಸ್ ಅವರಿಂದ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಈಗಾಗಲೇ ಒಂದು ಲಕ್ಷ ರೂಪಾಯಿ ಲಂಚ ಪಡೆದಿದ್ದ ಕೆ.ಆರ್. ಮಂಜು ಮತ್ತು ಭರತ್ ಇಂದು ದಾವಣಗೆರೆ ನಗರ ಯೋಜನಾ ಪ್ರಾಧಿಕಾರದ ಕಚೇರಿಯಲ್ಲಿ ಎರಡು ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎಸ್. ಕೌಲಾಪುರೆ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.