ಬೆಂಗಳೂರು: ಸಾಹಿತ್ಯ ಸಂಶೋಧಕ ಎಂ.ಎಂ.ಕಲಬುರ್ಗಿ ಹಾಗೂ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ವಿಶೇಷ ನ್ಯಾಯಾಲಯ ರಚನೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಎಂ.ಎಂ.ಕಲಬುರ್ಗಿ ಹಾಗೂ ಗೌರಿ ಲಂಕೇಶ್ ಹತ್ಯೆ ಪ್ರಕರಣ ಸಂಬಂಧ ವಿಶೇಷ ಕೋರ್ಟ್ ರಚನೆ ಜೊತೆಗೆ ಪೂರ್ಣಾವಧಿ ನ್ಯಾಯಾಧೀಶರ ನೇಮಕ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಸರ್ಕಾರದ ಅಪರಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ.
ಗೌರಿ ಲಂಕೇಶ್ ಹಾಗೂ ಎಂ.ಎಂ.ಕಲಬುರ್ಗಿ ಅವರನ್ನು ಗುಂಡಿಟ್ಟು ಹತ್ಯೆ ಮಾಡಲಾಗಿತ್ತು. ಪ್ರಕರಣದ ಆರೋಪಿಗಳನ್ನು ಬಂಧಿಸಲಾಗಿದ್ದರೂ ಕೊಲೆಗೆ ಸುಪಾರಿಕೊಟ್ಟಿದ್ದು ಯಾರು? ಯಾವ ಉದ್ದೇಶಕ್ಕೆ ಕೊಲೆ ಮಾಡಲಾಗಿದೆ ಎಂಬುದು ಈವರೆಗೂ ತಿಳಿದುಬಂದಿಲ್ಲ. ಪ್ರಕರಣದ ವಿಚಾರಣೆ ಇನ್ನೂ ಮಂದಗತಿಯಲ್ಲೇ ಸಾಗಿದೆ. ಈ ಹಿನ್ನೆಲೆಯಲ್ಲಿ ಈ ಪ್ರಕರಣಗಳ ಬಗ್ಗೆ ಪ್ರತ್ಯೇಕ ನ್ಯಾಯಾಲಯ ರಚಿಸಿ ತ್ವರಿತ ವಿಚಾರಣೆ ನಡೆಸುವ ನಿಟ್ಟಿನಲ್ಲಿ ವಿಶೇಷ ಕೋರ್ಟ್ ರಚನೆಯಾಗಬೇಕು ಎಂದು ಸಿಎಂ ತಿಳಿಸಿದ್ದಾರೆ.