ದಾವಣಗೆರೆ: ಸ್ವಪಕ್ಷದ ವಿರುದ್ಧವೇ ಅಸಮಾಧಾನ ಹೊರಹಾಕಿ ಬಿಜೆಪಿ ನಾಯಕನಿಲ್ಲದ ಹಡಗಿನಂತಾಗಿದೆ ಎಂದು ಕಿಡಿ ಕಾರುತ್ತಿದ್ದ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ, ಇದೀಗ ಬಿ.ವೈ.ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹಿಸಿದ್ದಾರೆ.
ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಂ.ಪಿ.ರೇಣುಕಾಚಾರ್ಯ, ಬಿ.ವೈ.ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಬೇಕು. ಲೋಕಸಭಾ ಚುನಾವಣೆಯ ದೃಷ್ಟಿಯಿಂದ ಹಾಗೂ ಪಕ್ಷಕ್ಕೆ ಒಳ್ಳೆಯದಾಗಬೇಕು ಎನ್ನುವುದಾದರೆ ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಸ್ಥಾನ ಕೊಡಬೇಕು ಎಂದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮಾಸ್ ಲೀಡರ್ ಹೌದು. ಅವರು ದೇಶಕ್ಕೆ ನಾಯಕ. ಆದ್ರೆ ರಾಜ್ಯದಲ್ಲಿ ಮೋದಿ ಫೋಟೋ ತೋರಿಸಿದ್ರೆ ಸಾಲದು. ಅದು ಚುನಾವಣೆಯಲ್ಲಿ ಮತವಾಗಿ ಪರಿವರ್ತನೆಯಾಗಬೇಕು. ರಾಜ್ಯದಲ್ಲಿ ಬಿಜೆಪಿಗೆ ಮತ ತರುವ ಶಕ್ತಿ ಇರುವುದು ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಬಿ.ವೈ.ವಿಜಯೇಂದ್ರಗೆ ಮಾತ್ರ ಎಂದು ಹೇಳಿದ್ದಾರೆ.
ಇದೇ ವೇಳೆ ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರವಾಗಿಯೂ ಪ್ರತಿಕ್ರಿಯಿಸಿದ ರೇಣುಕಾಚಾರ್ಯ, ಮೈತ್ರಿ ಬಗ್ಗೆ ಹಲವರಿಗೆ ಬೇಸರವಿದೆ. ಮೈತ್ರಿ ಅಂತಾ ಬಿಜೆಪಿಯನ್ನು ಹೆಚ್.ಡಿ.ಕುಮಾರಸ್ವಾಮಿಗೆ ಅಡ ಇಡಲಾಗದು. ಬಿಜೆಪಿಯಲ್ಲಿ ಸಮರ್ಥ ನಾಯಕರಿದ್ದಾರೆ. ಪಕ್ಷಕ್ಕೆ ಒಳ್ಳೆಯದಾಗುವುದಿದ್ದರೆ ಮೈತ್ರಿ ಮಾಡಿಕೊಳ್ಳಲಿ ಎಂದಿದ್ದಾರೆ.