ದಾವಣಗೆರೆ: ಇತ್ತೀಚಿನವರೆಗೂ ಸ್ವಪಕ್ಷ ಬಿಜೆಪಿ ನಾಯಕರ ವಿರುದ್ಧವೇ ವಾಗ್ದಾಳಿ ನಡೆಸುತ್ತಿದ್ದ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಈಗ ಬಿ.ವೈ.ವಿಜಯೇಂದ್ರ ರಾಜ್ಯಾಧ್ಯಕ್ಷರಾಗುತ್ತಿದ್ದಂತೆ ತಮ್ಮ ವರಸೆ ಬದಲಿಸಿದಂತಿದೆ.
ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ ಆದೇಶ ಹಿಂಪಡೆಯಲು ಸಚಿವ ಸಂಪುಟದಲ್ಲಿ ನಿರ್ಧರಿಸಿರುವ ವಿಚಾರವಾಗಿ ದಾವಣಗೆರೆ ಜಿಲ್ಲೆ ಹೊನ್ನಾಳಿಯಲ್ಲಿ ಪ್ರತಿಕ್ರಿಯಿಸಿರುವ ರೇಣುಕಾಚಾರ್ಯ, ಸಿಬಿಐಗೆ ನೀಡಿದ್ದ ತನಿಖಾ ದೇಶವವನ್ನು ಹಿಂಪಡೆದು ಸಿಎಂ ಸಿದ್ದರಾಮಯ್ಯ ಸರ್ಕಾರ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಡಿ.ಕೆ.ಶಿವಕುಮಾರ್ ವಿರುದ್ಧ ದಾಖಲಾಗಿದ್ದ ಆರೋಪಗಳನ್ನು ಆಧರಿಸಿಯೇ ಆಗಿನ ಸಿಎಂ ಬಿ.ಎಸ್.ಯಡಿಯೂರಪ್ಪ ಸಿಬಿಐ ತನಿಖೆಗೆ ಆದೇಶ ನೀಡಿದ್ದರು. ತನಿಖೆಯನ್ನು ಹೆಚ್ಚು ಕಡಿಮೆ ಪೂರ್ಣಗೊಳಿಸಿ ಚಾರ್ಜ್ ಶೀಟ್ ಸಲ್ಲಿಸುವ ಹಂತದಲ್ಲಿ ತನಿಖಾ ಆದೇಶ ಹಿಂಪಡೆದಿರುವುದು ಅಕ್ಷಮ್ಯ ಅಪರಾಧ ಎಂದರು.
ಸರ್ಕಾರ ತನ್ನ ನಿಲುವು ಬದಲಿಸಬೇಕು. ಇಲ್ಲವಾದಲ್ಲಿ ಸದನದ ಒಳಗೆ ಹಾಗೂ ಹೊರಗೆ ಬಿಜೆಪಿ ಉಗ್ರ ಹೋರಾಟ ನಡೆಸಲಿದೆ ಎಂದು ಎಚ್ಚರಿಸಿದರು.