ಬೆಂಗಳೂರು : ಎಸ್.ಎಸ್.ಎಲ್.ಸಿ ಪರೀಕ್ಷೆ ಮಾರ್ಚ್ 25 ರಿಂದ ಏಪ್ರಿಲ್ 6 ರವರೆಗೆ ನಡೆಯಲಿದ್ದು, ಪರೀಕ್ಷೆಯನ್ನು ಸುಗಮವಾಗಿ ಮತ್ತು ಪರೀಕ್ಷಾ ಅವ್ಯವಹಾರ ತಡೆಗಟ್ಟಲು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 144 ಸೆಕ್ಷನ್ ಜಾರಿಗೊಳಿಸಿ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಹಾಗೂ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಇರುವ ಜೆರಾಕ್ಸ್ ಅಂಗಡಿ, ಇಂಟರ್ ನೆಟ್ ಕೇಂದ್ರ ಮುಚ್ಚುವಂತೆ ಆದೇಶಿಸಲಾಗಿದೆ.
ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ
1) ವಿದ್ಯಾರ್ಥಿಗಳು, ಸರಳ ಕ್ಯಾಲ್ಕುಲೇಟರ್ಗಳನ್ನು ಮಾತ್ರ ಬಳಸಲು ಅವಕಾಶ
2) ಸ್ಟ್ರಾಟಿಸ್ಟಿಕ್ಸ್ ವಿಷಯದಲ್ಲಿ ಮಾತ್ರ ಸೈಂಟಿಫಿಕ್ ಕ್ಯಾಲ್ಕುಲೇಟರ್ ಬಳಸಲು ಅನುಮತಿ
3) ಪರೀಕ್ಷೆಯ ಅಂತಿಮ ಬೆಲ್ ಹೊಡೆಯುವ ಮುನ್ನ ಪರೀಕ್ಷಾ ಕೊಠಡಿಯಿಂದ ಹೊರಡುವ ವಿದ್ಯಾರ್ಥಿಗಳಿಂದ ಉತ್ತರ ಪತ್ರಿಕೆ ಮತ್ತು ಪ್ರಶ್ನೆ ಪತ್ರಿಕೆಗಳನ್ನು ಕಡ್ಡಾಯವಾಗಿ ಪಡೆಯಲಾಗುತ್ತದೆ.
4) ಗುರುತಿನ ಚೀಟಿ ಹಾಗೂ ಹಾಲ್ ಟಿಕೆಟ್ ಕಡ್ಡಾಯ
5) ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಪ್ರವೇಶ ಪತ್ರ ತೋರಿಸಿ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಪ್ರಯಾಣ ಮಾಡಬಹುದಾಗಿದೆ.
6) ಮೊಬೈಲ್ ಫೋನ್ , ಎಲೆಕ್ಟ್ರಿಕಲ್ ಉಪಕರಣಗಳ ಬಳಕೆ ನಿಷೇಧ
7) ಪರೀಕ್ಷಾ ಅವಧಿಗಿಂತ ಮುಂಚೆ ಹೊರಕ್ಕೆ ಹೋಗುವ ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆ ನೀಡಲಾಗುವುದಿಲ್ಲ.
ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಮೊಬೈಲ್ ಪೇಜರ್, ಝರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ.
ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಪತ್ರ ಪಡೆದ ಹಾಗೂ ನಿಯೋಜಿತ ಶಿಕ್ಷಕರನ್ನು, ಜಾಗೃತ ದಳದವರನ್ನು ಹೊರತುಪಡಿಸಿ ಇನ್ನುಳಿದವರಿಗೆ ಪರವಾನಿಗೆ ಇಲ್ಲದೇ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಮಾಡುವುದನ್ನು ನಿಷೇಧಿಸಲಾಗಿದೆ. ನಕಲು ಮಾಡುವ ಸಾಮಗ್ರಿಗಳನ್ನು ಹಾಗೂ ಹೊರಗಿನಿಂದ ಕಾಪಿ ಬರೆದು ಪರೀಕ್ಷಾ ಕೇಂದ್ರಗಳಲ್ಲಿ ಪೂರೈಸುವುದನ್ನು ನಿರ್ಬಂಧಿಸಲಾಗಿದೆ.
ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿಗಳಲ್ಲಿ ಪ್ರವೇಶ ದ್ವಾರಕ್ಕೆ ವಿರುದ್ಧವಾಗಿ ಮುಖ ಮಾಡಿ ಕುಳಿತು ಪರೀಕ್ಷೆ ಬರೆಯುವಂತೆ ವ್ಯವಸ್ಥೆ ಮಾಡಬೇಕು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸೂಚಿಸಿದೆ. ಈ ದಿಕ್ಕಿನಲ್ಲಿ ಕುಳಿತು ಪರೀಕ್ಷೆ ಬರೆದರೆ ಅಕ್ರಮ ಎಸಗಿದರೆ ದ್ವಾರದಲ್ಲೇ ಕಾಣುತ್ತದೆ, ಈ ನಿಟ್ಟಿನಲ್ಲಿ ಇಲಾಖೆ ಈ ಕ್ರಮ ಕೈಗೊಂಡಿದೆ. ಇನ್ನೂ, ಪರೀಕ್ಷಾ ಕೊಠಡಿ ಹಾಗೂ ಆವರಣದಲ್ಲಿ ಕಡ್ಡಾಯವಾಗಿ ಸಿಸಿಟಿವಿ ಹಾಕಿಸುವಂತೆ ಶಿಕ್ಷಣ ಇಲಾಖೆ ಸೂಚಿಸಿದೆ.