ಬೆಂಗಳೂರು: ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿತರಾಗಿದ್ದ ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
15 ದಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಅವರು ಜಾಮೀನು ಪ್ರಕ್ರಿಯೆ ಮುಗಿಸಿ ಹೊರಗೆ ಬಂದಿದ್ದಾರೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಜಾಮೀನು ಮಂಜೂರು ಮಾಡಿದೆ. 5 ಲಕ್ಷ ರೂಪಾಯಿ ಮೊತ್ತದ ಬಾಂಡ್, ಇಬ್ಬರ ಶೂರಿಟಿ ನೀಡುವಂತೆ, 3 ವಾರಕ್ಕೊಮ್ಮೆ ಲೋಕಾಯುಕ್ತ ಪೊಲೀಸರ ಮುಂದೆ ಹಾಜರಾಗಬೇಕು, ತನಿಖಾಧಿಕಾರಿ ವಶಕ್ಕೆ ಪಾಸ್ಪೋರ್ಟ್ ನೀಡಬೇಕು ಎಂದು ಷರತ್ತು ವಿಧಿಸಿ ಜಾಮೀನು ನೀಡಲಾಗಿದೆ.
ಮಾಡಾಳ್ ವಿರೂಪಾಕ್ಷಪ್ಪ ಜೈಲು ಸೇರಿದ್ದ ಹಿನ್ನಲೆಯಲ್ಲಿ ಅವರಿಗೆ ಬಿಜೆಪಿ ಟಿಕೆಟ್ ಕೈತಪ್ಪಿದೆ. ಅವರ ಪುತ್ರ ಮಲ್ಲಿಕಾರ್ಜುನ್ ಗೆ ಟಿಕೆಟ್ ನೀಡಬೇಕೆಂಬ ಒತ್ತಾಯ ಕೇಳಿ ಬಂದಿತ್ತು. ಆದರೆ ಬಿಜೆಪಿ ಟಿಕೆಟ್ ನೀಡಿಲ್ಲ.
ಮಾಡಾಳ್ ವಿರೂಪಾಕ್ಷಪ್ಪ ಜೈಲಿಂದ ಹೊರ ಬಂದ ನಂತರ ಮಾತನಾಡಿ, ಮನೆಗೆ ಹೋದ ಬಳಿಕ ಚರ್ಚೆ ನಡೆಸಿ ಮುಂದಿನ ರಾಜಕೀಯ ನಡೆ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಹೇಳಿದ್ದಾರೆ.