ಬೆಂಗಳೂರು: ಮುಸ್ಲಿಂ ಸಮುದಾಯದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗದಂತೆ ಅವರ ಅನುಕೂಲಕ್ಕಾಗಿ ರಾಜ್ಯದಲ್ಲಿ ಮದರಸ ಬೋರ್ಡ್ ಸ್ಥಾಪನೆ ಮಾಡಲು ಚರ್ಚೆ ನಡೆದಿದೆ ಎಂದು ವಸತಿ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಭಾನುವಾರ ನಡೆದ ಸುನ್ನಿ ಸ್ಟೂಡೆಂಟ್ ಫೆಡರೇಶನ್ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮದರಸ ಮಂಡಳಿ ಸ್ಥಾಪನೆಗೆ ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ಮುಸ್ಲಿಂ ಮಕ್ಕಳ ಶಿಕ್ಷಣಕ್ಕೆ ಎಲ್ಲಾ ರೀತಿಯ ನೆರವು ನೀಡುತ್ತಿದೆ. ಕೇರಳದ ಮದರಸ ಶಿಕ್ಷಣ ಎಲ್ಲರಿಗೂ ಮಾದರಿಯಾಗಿದ್ದು, ನಮ್ಮ ರಾಜ್ಯದ ಮದರಸಗಳಲ್ಲಿ ಕನ್ನಡ ಕಲಿಸಲು ತೀರ್ಮಾನಿಸಿದ್ದೇವೆ. ಹಿಂದಿನ ಸರ್ಕಾರ ನಿಲ್ಲಿಸಿದ್ದ ವಿದ್ಯಾರ್ಥಿವೇತನ ಮತ್ತೆ ಆರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.
ಮುಸ್ಲಿಂ ಸಮುದಾಯ ಶಿಕ್ಷಣದಲ್ಲಿ ಹಿಂದೆ ಉಳಿದಿದೆ. ಶಿಕ್ಷಣ ಇದ್ದರೆ ಮಾತ್ರ ದೇಶದ ಪ್ರಗತಿ ಸಾಧ್ಯ. ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್ ಶೈಕ್ಷಣಿಕ ಕ್ಷೇತ್ರದಲ್ಲಿ ಮಾದರಿಯ ಸೇವೆ ಸಲ್ಲಿಸುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.