alex Certify ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: 6 ದಿನವೂ ಮೊಟ್ಟೆ ವಿತರಣೆಗೆ ಸೆ. 25 ರಂದು ಚಾಲನೆ: “ನಮ್ಮ ಶಾಲೆ ನಮ್ಮ ಜವಾಬ್ದಾರಿ” ಲೋಗೋ ಅನಾವರಣಗೊಳಿಸಿದ ಮಧು ಬಂಗಾರಪ್ಪ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: 6 ದಿನವೂ ಮೊಟ್ಟೆ ವಿತರಣೆಗೆ ಸೆ. 25 ರಂದು ಚಾಲನೆ: “ನಮ್ಮ ಶಾಲೆ ನಮ್ಮ ಜವಾಬ್ದಾರಿ” ಲೋಗೋ ಅನಾವರಣಗೊಳಿಸಿದ ಮಧು ಬಂಗಾರಪ್ಪ ಮಾಹಿತಿ

ಬೆಳಗಾವಿ: ನಮ್ಮ ಶಾಲೆ ನಮ್ಮ‌ ಜವಾಬ್ದಾರಿ ಕಾರ್ಯಕ್ರಮವು ಶಿಕ್ಷಣ ಇಲಾಖೆಯ ಮಹತ್ವಾಕಾಂಕ್ಷೆಯ ಕಾರ್ಯಕ್ರಮವಾಗಿದೆ. ಈ ಕಾರ್ಯಕ್ರಮದ ಮೂಲಕ ಸರ್ಕಾರಿ ಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವುದರ ಮೂಲಕ ಅವರ ಭವಿಷ್ಯವನ್ನು ಉಜ್ವಲಗೊಳಿಸಬಹುದಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಬೆಳಗಾವಿ ಸುವರ್ಣಸೌಧದಲ್ಲಿ ಬುಧವಾರ ಜರುಗಿದ ನಮ್ಮ‌ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮದ ಲೋಗೋ ಅನ್ನು ವಿದ್ಯಾರ್ಥಿಗಳಿಂದ ಅನಾವವರಣಗೊಳಿಸಿ ದಾನಿಗಳಿಗೆ ಗೌರವ ಸಮರ್ಪಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿನ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ‌ಪಡಿಸಲು ಸರಕಾರದ ಜೊತೆಗೆ ದಾನಿಗಳು ಕೈಜೋಡಿಸಿದಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಸಮಾಜದಲ್ಲಿ ಉತ್ತಮ ವ್ಯಕ್ತಿಯನ್ನಾಗಿ ರೂಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ಮಕ್ಕಳಿಗೆ ಉತ್ತಮ‌ ಶಿಕ್ಷಣ ನೀಡಿದಲ್ಲಿ ಉತ್ತಮ ಸಮಾಜ ನಿರ್ಮಾಣ ಮಾಡಬಹುದಾಗಿದೆ ಎಂದರು.

ರಾಜ್ಯದಲ್ಲಿ ಸರ್ಕಾರ ಹಾಗೂ ಅನುದಾನಿತ ಶಾಲೆಗಳಲ್ಲಿ ಅಂದಾಜು 56 ಲಕ್ಷ ವಿಧ್ಯಾರ್ಥಿಗಳಿದ್ದು ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲಾ ಕಾಳೆಜುಗಳಲ್ಲಿ ಅಂದಾಜು ಒಂದು ಕೋಟಿ ವಿದ್ಯಾರ್ಥಿಗಳು ವ್ಯಾಸಾಂಗ ಮಾಡುತ್ತಿದ್ದಾರೆ. ಕಳೆದ ಶೈಕ್ಷಣಿಕ ವರ್ಷದಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಗೆ ಮೂರು ಬಾರಿ ಅವಕಾಶ ನೀಡಲಾಗಿದ್ದು, ಈ ಅವಕಾಶದ ಸದುಪಯೋಗ ಪಡೆದುಕೊಂಡ 82 ಸಾವಿರ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಇಂದು ಕಾಲೇಜುಗಳಿಗೆ ಪ್ರವೇಶ ಪಡೆದಿರುತ್ತಾರೆ ಎಂದರು.

ಶಾಲಾ ಮಕ್ಕಳಲ್ಲಿ ಉತ್ತಮ ಶಿಕ್ಷಣದ ಜೊತೆಗೆ ಪೌಷ್ಠಿಕ ಆಹಾರ ನೀಡುವದು ಸರಕಾರದ ಧ್ಯೇಯವಾಗಿದ್ದು, ಈ ಹಿನ್ನಲೆಯಲ್ಲಿ ಅಜೀಂ ಪ್ರೇಮಜಿ‌ ಫೌಂಡೇಶನ್ ಸಹಕಾರದೊಂದಿಗೆ ವಿದ್ಯಾರ್ಥಿಗಳಿಗೆ ವಾರದಲ್ಲಿ ಎರಡು ದಿನ‌ ನೀಡಲಾಗುತ್ತಿರುವ‌ ಮೊಟ್ಟೆಯನ್ನು ವಾರದ ಆರು‌ ದಿನಗಳ ಕಾಲ ವಿತರಿಸುವ ಕಾರ್ಯಕ್ರಮಕ್ಕೆ ಸೆ. 25 ರಂದು ಯಾದಗಿರಿಯಲ್ಲಿ ಚಾಲನೆ ನೀಡಲಾಗುವುದು ಎಂದರು.

ಸರಕಾರಿ ಶಾಲಾ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ‌ ಪ್ರಾರಭದಿಂದಲೇ ನೀಡುವ ಸದುದ್ದೇಶದೊಂದಿಗೆ 45 ಸಾವಿರ ಅತಿಥಿ ಶಿಕ್ಷಕರಿಗೆ ಶಾಲಾ ಪ್ರಾರಂಭಕ್ಕೆ ಮುನ್ನವೆ ನೇಮಕಾತಿ ಆದೇಶ ಪ್ರತಿಗಳನ್ನು ವಿತರಿಸಲಾಗಿದೆ. ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುವ ನಿಟ್ಟಿನಲ್ಕಿ ರಾಜ್ಯ ಸರ್ಕಾರದಿಂದ ಈಗಾಗಲೇ ಕಲ್ಯಾಣ ಕರ್ನಾಟಕ ಭಾಗದಲ್ಲಿ 1008 ಎಲ್.ಕೆ.ಜಿ., ಯು.ಕೆ.ಜಿ. ತರಗತಿಗಳನ್ನು ಪ್ರಾರಂಭಿಸಲಾಗಿದ್ದು, ಕ್ರಮೇಣ ಇದನ್ನು ರಾಜ್ಯಾದ್ಯಂತ ವಿಸ್ತರಿಸಲು ಕ್ರಮ ವಹಿಸಲಾಗುವುದು ಎಂದರು.

ಸರ್ಕಾರಿ ಶಾಲೆಗಳಲ್ಲಿ‌ ಹಾಗೂ ಗ್ರಾಮೀಣ ಭಾಗದಲ್ಲಿನ ವಿಧ್ಯಾರ್ಥಿಗಳು ಉನ್ನತ ಹುದ್ದೇ ಸ್ಥಾನ ಮಾನವನ್ನು ಪಡೆದುಕೊಳ್ಳಲು ಅನುಕೂಲವಾಗುವಂತೆ ಸರಕಾರದಿಂದಲೇ ನೀಟ್, ಸಿಇಟಿ ಕೋಚಿಂಗ್ ನೀಡುವ ಕಾರ್ಯಕ್ರಮವನ್ನು ರೂಪಿಸಲಾಗಿದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಮಾತನಾಡಿ, ಶಿಕ್ಷಣ ಇಲಾಖೆಯಲ್ಲಿ‌ ಮಹತ್ತರ ಬದಲಾವಣೆ ತರುವಲ್ಲಿ ಶಿಕ್ಷಣ ಸಚಿವರು ಪ್ರಯತ್ನಿಸುತ್ತಿದ್ದಾರೆ.‌ ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ನೀಡುವದರ ಮೂಲಕ ಖಾಸಗಿ ಶಾಲೆಗಳೊಂದಿಗೆ ಪೈಪೋಟಿ ನೀಡುವದೇ ಸರಕಾರದ ಮುಖ್ಯ ಉದ್ದೇಶವಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ‌ ವಹಿಸಿದ್ದ ಮಹಿಳಾ ಮತ್ತು ಮಕ್ಕಳ‌ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ ಅವರು ಮಾತನಾಡಿ, ಸಮಾಜ, ದೇಶ ಬೆಳೆಯಬೆಕಾದರೆ ಸರ್ಕಾರಿ ಸ್ವಾಮ್ಯದ ಶಾಲೆಗಳನ್ನು ಉಳಿಸಿ ಬೆಳೆಸಬೇಕು ಎಂದರು.

ಶಾಸಕರಾದ ಎಂ. ನರೇಂದ್ರಸ್ವಾಮಿ ಹಾಗೂ ಬಸವರಾಜ ಶಿವಣ್ಣವರ, ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ ಅವರು ಮಾತನಾಡಿದರು.

ರಾಜ್ಯ ಹಣಕಾಸು ಸಂಸ್ಥೆಯ ಅಧ್ಯಕ್ಷ ಮಹಾಂತೇಶ ಕೌಜಲಗಿ,  ಶಾಸಕರಾದ ಆಸೀಫ್(ರಾಜು)ಸೇಠ್, ವಿಠ್ಠಲ ಹಲಗೇಕರ, ವಿಶ್ವಾಸ ವೈದ್ಯ, ಬಾಬಾಸಾಹೇಬ ಪಾಟೀಲ, ಬುಡಾ ಅಧ್ಯಕ್ಷ ಲಕ್ಷ್ಮಣರಾವ ಚಿಂಗಳೆ, ಹಲಗಾ, ಬಸ್ತವಾಡ ಗ್ರಾ.ಪಂ. ಅಧ್ಯಕ್ಷರಾದ ಲಕ್ಷ್ಮಿ ಗಜಪತಿ, ಮಹಾದೇವಿ ಪಾಟೀಲ, ಶಿಕ್ಷಣ ಇಲಾಖೆ ಪ್ರಧಾನಕಾರ್ಯದರ್ಶಿ ರಾಕೇಶ್ ಕುಮಾರ ಸಿಂಗ್, ಆಯುಕ್ತೆ ಕಾವೇರಿ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ ಪಂಚಾಯತ ಸಿ.ಇ.ಓ. ರಾಹುಲ ಶಿಂಧೆ, ಶಾಲಾ ಶಿಕ್ಷಣ ಇಲಾಖೆ ಬೆಳಗಾವಿ ವಿಭಾಗದ ಅಪರ ಆಯುಕ್ತರಾದ ಜಯಶ್ರೀ ಶಿಂತ್ರಿ, ಕ.ಪ್ರೌ.ಶಿ.ಪ.‌ಮಂಡಳಿ ಕಾರ್ಯದರ್ಶಿ ಸಕ್ರೆಪ್ಪಗೌಡ ಬಿರಾದಾರ, ಸಿ.ಟಿ.ಇ.‌ಪ್ರಾಚಾರ್ಯ ಎನ್.ಶ್ರೀಕಂಠ, ಬೆಳಗಾವಿ ಶಾಲಾ‌ ಶಿಕ್ಷಣ ಇಲಾಖೆ ಉಪನಿರ್ದೆಶಕಿ ಲೀಲಾವತಿ ಹಿರೇಮಠ, ಚಿಕ್ಕೋಡಿ ಉಪನಿರ್ದೆಶಕ ಬಿ.ಎ.ಮೇಕಲಮರಡಿ, ಡಯಟ್ ಉಪನಿರ್ದೆಶಕ ಬಸವರಾಜ ನಾಲತವಾಡ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ನಮ್ಮ‌ ಶಾಲೆ‌ ನಮ್ಮ ಜವಾಬ್ದಾರಿ ಕಾರ್ಯಕ್ರಮದ ಅಂಗವಾಗಿ‌ ತಾವು ಕಲಿತ ಶಾಲೆಗಳಿಗೆ ದಾನ ಮಾಡಿದಂತಹ ದಾನಿಗಳಿಗೆ ಸನ್ಮಾನಿಸಲಾಯಿತು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...