ಶಿವಮೊಗ್ಗ: ಎಸ್.ಎಸ್.ಎಲ್.ಸಿ. ಪೂರ್ವ ಸಿದ್ಧತಾ ಪರೀಕ್ಷಾ ಶುಲ್ಕ ಸಂಗ್ರಹದಲ್ಲಿ 10 ರೂಪಾಯಿ ಕಡಿತ ಮಾಡಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದ್ದಾರೆ.
ಪರೀಕ್ಷಾ ವೆಚ್ಚದ ಮೊತ್ತ ಪ್ರತಿ ವಿದ್ಯಾರ್ಥಿಯಿಂದ ಪಡೆಯಲಾಗುತ್ತಿದೆ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ 60 ರೂಪಾಯಿ ಶುಲ್ಕ ಸಂಗ್ರಹಿಸಲಾಗುತ್ತಿತ್ತು. ಹಿಂದೆ ಶುಲ್ಕ ಸಂಗ್ರಹ ಆದೇಶ ಹೊರಡಿಸಲಾಗಿತ್ತು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ 10 ರೂ. ಕಡಿತಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಹೊರಡಿಸಿದ ಸುತ್ತೋಲೆ ಬಗ್ಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಮಧು ಬಂಗಾರಪ್ಪ, ಎಲ್ಲದರಲ್ಲಿಯೂ ತಪ್ಪು ಹುಡುಕುವುದು ಬೇಡ. ಇಂತಹ ವಿಚಾರಗಳಿಂದ ಯಾವುದೇ ಪ್ರಯೋಜನ ಇಲ್ಲ. ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುವುದು ಸರಿಯಲ್ಲ. ಪ್ರಸ್ತುತ 50 ರೂ. ಶುಲ್ಕ ಸಂಗ್ರಹಕ್ಕೆ ಆದೇಶ ಹೊರಡಿಸಿದ್ದು, ಅವಶ್ಯವಿದ್ದಲ್ಲಿ ಇನ್ನು ಕಡಿಮೆ ಶುಲ್ಕ ಸಂಗ್ರಹಕ್ಕೆ ಕ್ರಮ ಕೈಗೊಳ್ಳಲಾಗುವುದು. ಬಿಜೆಪಿ ಸರ್ಕಾರದ ಅವಧಿಯಲ್ಲಿ 60 ರೂ. ಶುಲ್ಕ ಸಂಗ್ರಹಿಸಲಾಗುತ್ತಿತ್ತು. ಅದನ್ನು 10 ರೂ. ಕಡಿತಗೊಳಿಸಲಾಗಿದೆ ಎಂದು ಹೇಳಿದ್ದಾರೆ.