ಶಿವಮೊಗ್ಗ: ಸಮಾಜ ಮತ್ತು ಸರ್ಕಾರದಲ್ಲಿನ ಲೋಪ ದೋಷಗಳನ್ನು ಸರಿಪಡಿಸುವ ಮೂಲಕ ಸರಿದಾರಿಗೆ ತರುವ ಕಾರ್ಯವನ್ನು ಮಾಧ್ಯಮಗಳು ಮಾಡುತ್ತಿವೆ. ಇದರಿಂದಾಗಿ ಶಾಸಕಾಂಗ ಮತ್ತು ಕಾರ್ಯಾಂಗದಲ್ಲಿ ಸುಧಾರಣೆ ಸಾಧ್ಯವಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಶಾಖೆ ವತಿಯಿಂದ ನೆಹರೂ ಕ್ರೀಡಾಂಗಣದಲ್ಲಿ ನಡೆದ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿ, ಮಾಧ್ಯಮಗಳ ಮೂಲಕ ಶಿಕ್ಷಣ ಇಲಾಖೆಯ ಸಮಸ್ಯೆಯನ್ನು ತಿಳಿಯಲು ಸಾಧ್ಯವಾಗುತ್ತದೆ ಎಂದರು.
ಅನೇಕ ಸಲ ಖುದ್ದಾಗಿ ಸಮಸ್ಯೆಗಳನ್ನು ತಿಳಿಯಲು ಸಾಧ್ಯವಾಗುವುದಿಲ್ಲ. ಅಂತಹ ಸಂದರ್ಭದಲ್ಲಿ ಮಾಧ್ಯಮಗಳ ಮೂಲಕ ಶಾಲಾ ಕಟ್ಟಡ ದುರಸ್ತಿ, ಶೌಚಾಲಯ, ವಿದ್ಯಾರ್ಥಿಗಳು, ಶಿಕ್ಷಕರ ಸಮಸ್ಯೆ ತಿಳಿಯಲು ಸಾಧ್ಯವಾಗುತ್ತದೆ ಎಂದರು.
ಸರ್ಕಾರ ಗ್ರಾಮೀಣ ಪ್ರದೇಶದ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಕ್ರಮ ಕೈಗೊಂಡಿದೆ. ಜಿಲ್ಲೆಯ ಪತ್ರಕರ್ತರಿಗೆ ನಿವೇಶನ ಹಂಚಿಕೆ ಮಾಡಲಾಗಿದ್ದು, ಕೆಲವರಿಗೆ ಇನ್ನು ನಿವೇಶನ ದೊರೆತಿಲ್ಲ ಎಂದು ತಿಳಿದಿದೆ. ನಿವೇಶನಗಳನ್ನು ಕೊಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು. ತಾಲೂಕು ಮತ್ತು ಗ್ರಾಮಾಂತರ ಭಾಗದ ಪತ್ರಕರ್ತರಿಗೆ ನಿವೇಶನ ಹಾಗೂ ಸರ್ಕಾರದಿಂದ ಸೌಲಭ್ಯ ಕೊಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.