ಶಿವಮೊಗ್ಗ: ಜನರನ್ನು ಕಚೇರಿಯಿಂದ ಕಚೇರಿಗೆ ಅಲೆಸದೇ ಒಂದೇ ಸೂರಿನಡಿ ಅವರ ಸಮಸ್ಯೆಗಳನ್ನು ಬಗೆಹರಿಸುವ ಉದ್ದೇಶದಿಂದ ಆಡಳಿತ ಸೌಧ ನಿರ್ಮಿಸಲಾಗಿದ್ದು, ಅಧಿಕಾರಿಗಳು ಉತ್ತಮವಾಗಿ ಸ್ಪಂದಿಸಬೇಕು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತೆ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದ್ದಾರೆ.
ಸಾಗರ ತಾಲ್ಲೂಕಿನ ನೂತನ ಆಡಳಿತಸೌಧ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿ, ಸಾರ್ವಜನಿಕರು ತಮ್ಮ ಕೆಲಸ ಕಾರ್ಯಗಳಿಗಾಗಿ ಪದೇ ಪದೇ ಸರ್ಕಾರಿ ಕಚೇರಿ ಅಲೆಯುವುದನ್ನು ಅಧಿಕಾರಿಗಳು ತಪ್ಪಿಸಬೇಕು. ಜನರ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಪರಿಹಾರ ಒದಗಿಸಬೇಕು ಎಂದರು.
ಸರ್ಕಾರ ರಚನೆ ಆಗುವ ಪೂರ್ವದಲ್ಲಿ ನೀಡಲಾಗಿದ್ದ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಯಶಸ್ವಿಯಾಗಿ ಜಾರಿಗೆ ತಂದಿದೆ. ಸರ್ಕಾರ ನುಡಿದಂತೆ ನಡೆದು ತನ್ನ ಮಾತನ್ನು ಉಳಿಸಿಕೊಂಡಿದೆ. ಇನ್ನು ಮುಂದೆ ಅಭಿವೃದ್ದಿ ಕೆಲಸಗಳು ವೇಗ ಪಡೆದುಕೊಳ್ಳಲಿವೆ. ಸರ್ಕಾರ 57 ಸಾವಿರ ಕೋಟಿಯನ್ನು ಬಡವರ ಮಡಿಲಿಗೆ ಹಾಕಿದೆ. ಬಡವರಿಗೆ ಹಣ ನೀಡಿದರೆ ಅವರು ಖರ್ಚು ಮಾಡಿ ಪುನಃ ಸರ್ಕಾರಕ್ಕೆ ಅನುಕೂಲವಾಗುವಂತೆ ಮಾಡುತ್ತಾರೆ. ಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಖಜಾನೆ ಖಾಲಿಯಾಗಿಲ್ಲ ಎಂದರು.
ಶಾಸಕರು ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ತಕ್ಷ ಗೋಪಾಲಕೃಷ್ಣ ಬೇಳೂರು ಮಾತನಾಡಿ, ನಮ್ಮ ಸರ್ಕಾರ ಬಡಜನತೆಗೆ ನೀಡಿರುವ ಐದು ಗ್ಯಾರಂಟಿಗಳು ಅತ್ಯಂತ ಉಪಯುಕ್ತವಾಗಿದ್ದು, ನಿಜವಾಗಿ ಜನರಿಗೆ ಬದಕಲು ಅವಕಾಶ ಮಾಡಿಕೊಟ್ಟಿದೆ ಎಂದರು.
ಎಂಎಡಿಬಿ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಮಾತನಾಡಿದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮಾಜಿ ಸಚಿವರು ಹಾಗೂ ಮಾಜಿ ವಿಧಾನಸಭಾ ಸಭಾಪತಿಗಳಾದ ಕಾಗೋಡು ತಿಮ್ಮಪ್ಪನವರನ್ನು ಈ ಸಂದರ್ಭದಲ್ಲಿ ಅಭಿಂದಿಸಲಾಯಿತು.
ಸಾಗರ ಎಸಿ ಯತೀಶ್ ಆರ್ ಸಂವಿಧಾನ ಪೀಠಿಕೆಯನ್ನು ಬೋಧಿಸಿದರು. ಕಾರ್ಯಕ್ರಮದಲ್ಲಿ ನಗರಸಭಾಧ್ಯಕ್ಷ ತುಕಾರಾಂ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಇಓ ನಾಗೇಶ್ ಬ್ಯಾಲಾಳ್, ಸಾಗರ ತಹಶಿಲ್ದಾರ್ ಸೈಯದ್ ಕಲೀಂ ಉಲ್ಲಾ, ಪಿಡಬ್ಲ್ಯುಡಿ ಎಇಇ ಮಂಜುನಾಥ್ ಇತರೆ ಅಧಿಕಾರಿಗಳು ಹಾಜರಿದ್ದರು.