ಬೆಳಗಾವಿ(ಸುವರ್ಣಸೌಧ): ಒಂದರಿಂದ ಐದನೇ ತರಗತಿಗೆ ಕನ್ನಡ ಮಾಧ್ಯಮ ಕಡ್ಡಾಯಕ್ಕೆ ಕಾನೂನು ಅಡ್ಡಿಯಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ಯು.ಬಿ. ವೆಂಕಟೇಶ್ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆಯಾಗಿದ್ದು, ಇಲ್ಲಿ ಯಾವುದೇ ರೀತಿಯಲ್ಲೂ ಹಿಂದಿ ಹೇರಿಕೆಗೆ ಅವಕಾಶ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಒಂದರಿಂದ ಐದನೇ ತರಗತಿವರೆಗೆ ಮಾತೃಭಾಷೆ ಅಥವಾ ರಾಜ್ಯ ಭಾಷೆಯಲ್ಲಿ ಶಿಕ್ಷಣ ನೀಡುವುದನ್ನು ಕಡ್ಡಾಯಗೊಳಿಸಲು ಸಾಧ್ಯವಿಲ್ಲ. ಅದಕ್ಕೆ ಕೆಲವು ಕಾನೂನು ತೊಡಕುಗಳಿವೆ. ಒಂದರಿಂದ ಐದನೇ ತರಗತಿವರೆಗೆ ಮಾತೃಭಾಷೆ ಅಥವಾ ರಾಜ್ಯ ಭಾಷೆ ಶಿಕ್ಷಣ ಮಾಧ್ಯಮವನ್ನಾಗಿ ಕಡ್ಡಾಯಗೊಳಿಸುವ ಮಸೂದೆಗೆ ಕೇಂದ್ರ ಅನುಮತಿಸಿಲ್ಲ. ಅಲ್ಲದೆ, ಕನ್ನಡ ಮಾಧ್ಯಮ ಕಡ್ಡಾಯಗೊಳಿಸುವುದರಿಂದ ಮೂಲಭೂತ ಹಕ್ಕುಗಳಿಗೆ ಧಕ್ಕೆ ಬರಲಿದೆ. ಸುಪ್ರೀಂ ಕೋರ್ಟ್ ತೀರ್ಪುಗಳು ಮಸೂದೆ ಜಾರಿಗೆ ತೊಡಕಾಗಿದೆ. ಹೀಗಾಗಿ ಕನ್ನಡ ಭಾಷೆ ಮಾಧ್ಯಮ ಶಿಕ್ಷಣ ಕಡ್ಡಾಯ ಇಲ್ಲ. ಪ್ರಥಮ ಮತ್ತು ದ್ವಿತೀಯ ಭಾಷೆಯಾಗಿ ಕನ್ನಡ ಕಲಿಸುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ಹೇಳಿದ್ದಾರೆ.