ಶಿವಮೊಗ್ಗ: ಏಪ್ರಿಲ್ ಕೊನೆಯ ವಾರ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ವೆಬ್ ಕಾಸ್ಟಿಂಗ್ ಅನುಷ್ಠಾನಗೊಳಿಸಿದ್ದಕ್ಕೆ ಆರಂಭದಲ್ಲಿ ಟೀಕೆ ಟಿಪ್ಪಣಿ ವ್ಯಕ್ತವಾಗಿತ್ತು. ಪರೀಕ್ಷೆ ಪಾರದರ್ಶಕತೆಗಾಗಿ ಇದನ್ನು ಜಾರಿ ಮಾಡಿದ್ದು ಸಾಕಷ್ಟು ಅನುಕೂಲವಾಗಿದೆ ಎಂದು ತಿಳಿಸಿದ್ದಾರೆ.
ಎಸ್ಎಸ್ಎಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಮೂರು ಪರೀಕ್ಷೆಗಳನ್ನು ಮಾಡಿದ್ದಕ್ಕೂ ಆಕ್ಷೇಪಣೆ ಕೇಳಿ ಬಂದಿತ್ತು. ಆದರೆ, ಈ ನಿರ್ಧಾರದಿಂದ ವಿದ್ಯಾರ್ಥಿಗಳ ಮೇಲಿನ ಪರೀಕ್ಷೆ ಒತ್ತಡ ಕಡಿಮೆಯಾಗಿದೆ. ತಜ್ಞರ ಸಲಹೆ ಮೇರೆಗೆ ಈ ನಿರ್ಧಾರ ಜಾರಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
ಪಿಯುಸಿಯಲ್ಲಿ ಶೇಕಡ 6ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಶಿಕ್ಷಣ ಸಚಿವನಾಗಿ ಸಮರ್ಥವಾಗಿ ಕೆಲಸ ಮಾಡಿರುವ ತೃಪ್ತಿ ನನಗಿದೆ. ಸರ್ಕಾರಿ ಕಾಲೇಜು ವಿದ್ಯಾರ್ಥಿಗಳು ಪಿಯು ಫಲಿತಾಂಶದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ಏಪ್ರಿಲ್ ಕೊನೆಯ ವಾರ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದ್ದಾರೆ.