ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿಯೂ ಎಲ್.ಕೆ.ಜಿ., ಯುಕೆಜಿ ಆರಂಭಿಸಲಾಗುವುದು. ಒಂದೇ ಸೂರಿನಡಿ 12ನೇ ತರಗತಿವರೆಗೆ ಶಿಕ್ಷಣ ಕಲ್ಪಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಸಿ.ಎಸ್.ಆರ್. ಕಾಂಕ್ಲೇವ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಕಲ್ಯಾಣ ಕರ್ನಾಟಕದ 1000 ಸರ್ಕಾರಿ ಶಾಲೆಗಳಲ್ಲಿ ಎಲ್.ಕೆ.ಜಿ., ಯುಕೆಜಿ ಆರಂಭಿಸಲಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಲಾಗುವುದು. ಎಲ್‌ಕೆಜಿಯಿಂದ 12ನೇ ತರಗತಿಯವರೆಗೆ ಒಂದೇ ಆವರಣದಲ್ಲಿ ಶಿಕ್ಷಣ ವ್ಯವಸ್ಥೆ ಕಲ್ಪಿಸಲು ಪ್ರಾಥಮಿಕ ಶಿಕ್ಷಣ ಇಲಾಖೆಯಲ್ಲಿ ಸಿಎಸ್ಆರ್ ನಿಧಿ ಬಳಕೆ ಮಾಡಿಕೊಂಡು ಶಾಲೆಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ಒಂದರಿಂದ ಹನ್ನೆರಡನೇ ತರಗತಿವರೆಗೆ 56 ಲಕ್ಷ ವಿದ್ಯಾರ್ಥಿಗಳು ಓದುತ್ತಿದ್ದಾರೆ. ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲಾಗಿದೆ. 45,000 ಅತಿಥಿ ಶಿಕ್ಷಕರ ಬಳಕೆ ಮಾಡಿಕೊಳ್ಳಲಾಗಿದೆ, 1200 ಶಿಕ್ಷಕರ ನೇಮಕಾತಿಯಾಗುತ್ತಿದ್ದು, 5000 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಸದ್ಯದಲ್ಲೇ ನಡೆಯಲಿದೆ ಎಂದು ಹೇಳಿದ್ದಾರೆ.