ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ 58,000 ಶಿಕ್ಷಕರ ಹುದ್ದೆಗಳನ್ನು ಕಾಲಮಿತಿಯೊಳಗೆ ಭರ್ತಿ ಮಾಡಿಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಭಾವಂತ ಶಿಕ್ಷಕರು ಶಿಕ್ಷಣ ಇಲಾಖೆಯ ಶಕ್ತಿಯಾಗಿದ್ದು, ಅತಿಥಿ ಶಿಕ್ಷಕರನ್ನು ಖಾಲಿ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುತ್ತಿರುವುದು ತಾತ್ಕಾಲಿಕ ಪರಿಹಾರವಷ್ಟೇ. ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು. ಹಂತ ಹಂತವಾಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ 58,000 ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಹೇಳಿದ್ದಾರೆ.
ಕಳೆದ ಸರ್ಕಾರದ ಅವಧಿಯಲ್ಲಿ 13,351 ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗಿದ್ದು, ಕೆಲವರು ಕೋರ್ಟ್ ಮೊರೆ ಹೋಗಿದ್ದರಿಂದ ಸ್ಥಳ ನಿಯೋಜನೆ ಆದೇಶ ವಿಳಂಬವಾಗಿದೆ. ಹೀಗಾಗಿ ಕಾನೂನು ನೆರವು ಪಡೆದು ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ಹೇಳಿದ್ದಾರೆ.