alex Certify ಅನುದಾನಿತ ಶಾಲೆಗಳಲ್ಲಿ 5 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅನುದಾನಿತ ಶಾಲೆಗಳಲ್ಲಿ 5 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ

 ಶಿವಮೊಗ್ಗ: ಪ್ರಸಕ್ತ ಸಾಲಿನಲ್ಲಿ ಮುಂಗಾರು ವಾಡಿಕೆಗಿಂತ ಹೆಚ್ಚು ಪ್ರಮಾಣದಲ್ಲಿ ಆಗಿದ್ದು, ರಾಜ್ಯದ ಎಲ್ಲಾ ಜಲಾಶಯಗಳಲ್ಲಿ ನೀರು ಭರ್ತಿಯಾಗಿದೆ. ಕೃಷಿ ಚಟುವಟಿಕೆಗಳು ಚುರುಕಾಗಿದ್ದು, ಸಹಜವಾಗಿ ರೈತರಲ್ಲಿ ಹರ್ಷ ಉಂಟು ಮಾಡಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಭದ್ರಾ ಜಲಾಶಯಕ್ಕೆ ಬಾಗಿನ ಸಮರ್ಪಿಸಿದ ನಂತರ ಏರ್ಪಡಿಸಿದ್ದ ಸರಳ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.

ಭದ್ರಾ ಜಲಾಶಯ ಕೂಡ ಸಕಾಲದಲ್ಲಿ ಭರ್ತಿಯಾಗಿದ್ದು, ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯಲ್ಲಿನ ರೈತರಿಗೆ ಉಪಕಾರಿಯಾಗಿದೆ. ಪ್ರಸ್ತುತ ಸಂದರ್ಭದಲ್ಲಿ ಆಡಳಿತಾರೂಢ ಸರ್ಕಾರ ಕೂಡ ಗೃಹಲಕ್ಷ್ಮಿ, ಶಕ್ತಿ, ಗೃಹಜ್ಯೋತಿ ಯುವನಿಧಿ, ಅನ್ಯಭಾಗ್ಯದಂತಹ ಅನೇಕ ಜನಪರ ಯೋಜನೆಗಳನ್ನು ಜಾರಿಗೊಳಿಸಿ ಜನಹಿತ ಕಾರ್ಯಕ್ರಮಗಳನ್ನು ಮುಂದುವರಿಸಿದೆ ಎಂದು ಹೇಳಿದ್ದಾರೆ.

ಜೋಗದಲ್ಲಿ ಸುಮಾರು 1200 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದೆ. ಇದರೊಂದಿಗೆ ಹೆಚ್ಚುವರಿಯಾಗಿ ಇನ್ನು 2000 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಗೆ ಹೊಸ ಯೋಜನೆ ರೂಪಿಸಲು ಯತ್ನಿಸಲಾಗುತ್ತಿದೆ ಎಂದರು.

ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಉದ್ದೇಶಿಸಲಾಗಿದ್ದು, ಈಗಾಗಲೇ ಕಳೆದ ಒಂದು ವರ್ಷದ ಅವಧಿಯಲ್ಲಿ 12 ಸಾವಿರ ಶಿಕ್ಷಕರನ್ನು ನೇಮಿಸಿಕೊಳ್ಳಲಾಗಿದೆ. ಅಂತೆಯೇ ಸರ್ಕಾರದ ಅನುದಾನದಿಂದ ನಡೆಯುತ್ತಿರುವ ಅನುದಾನಿತ ಶಾಲೆಗಳಲ್ಲಿನ ಕೊರತೆ ಇರುವ 5000 ಶಿಕ್ಷಕರ ನೇಮಕಾತಿಗೂ ಕೂಡ ಕ್ರಮ ಕೈಗೊಳ್ಳಲಾಗಿದೆ. ಉತ್ತಮ ಮತ್ತು ಗುಣಮಟ್ಟದ ಶಿಕ್ಷಣ  ನೀಡಲು ಕ್ರಮ ಕೈಗೊಳ್ಳಲಾಗಿದೆ. LKG, UKG ತರಗತಿಗಳನ್ನು ಸರ್ಕಾರದಿಂದಲೇ ಆರಂಭಿಸಲಾಗುತ್ತಿದೆ ಎಂದರು.

ಭದ್ರಾವತಿಯ ವಿಐಎಸ್ಎಲ್ ಮತ್ತು ಎಂಪಿಎಂ ಕಾರ್ಖಾನೆಗಳ ಪುನರಾರಂಭಕ್ಕೆ ಸರ್ಕಾರ ಸಕಾಲಿಕ ನಿರ್ಣಯ ಕೈಗೊಳ್ಳಲಿದೆ ಮಾತ್ರವಲ್ಲ ಪುನಶ್ಚೇತನಕ್ಕೆ ಕ್ರಮ ವಹಿಸಲಿದೆ. ಶರಾವತಿ ಸೇರಿದಂತೆ ರಾಜ್ಯದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭೂಮಿಯನ್ನು ಕಳೆದುಕೊಂಡು ಸಂತ್ರಸ್ತರಾಗಿರುವ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಲಿದೆ. ಅಲ್ಲದೆ ಪಾರಂಪರಿಕವಾಗಿ ವನವಾಸಿಗಳಾಗಿರುವ ಕುಟುಂಬಗಳಿಗೆ ಒಕ್ಕಲೆಬ್ಬಿಸದಂತೆ ಅರಣ್ಯ ಅಧಿಕಾರಿಗಳಿಗೆ ಸೂಚಿಸಲಾಗಿದೆ. 2015 ರ ನಂತರ ಅರಣ್ಯ ಒತ್ತುವರಿ ಮಾಡುವವರನ್ನು ಸರ್ಕಾರ ರಕ್ಷಿಸಲು ಸಾಧ್ಯವಾಗದು. ಪರಂಪರಾಗತ ವನವಾಸಿಗಳ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾತನಾಡಿ, ಸರ್ಕಾರವು ರೈತರು ಮತ್ತು ರೈತ ಮಹಿಳೆಯರ ಪರವಾಗಿ ಸದಾ ಕಾರ್ಯನಿರ್ವಹಿಸಲಿದೆ. ಪ್ರಸ್ತುತ ಭದ್ರಾ ಜಲಾಶಯದಿಂದ ರಾಜ್ಯದ ಸುಮಾರು 11 ಜಿಲ್ಲೆಗಳ 2.50 ಲಕ್ಷ ಹೆಕ್ಟರ್ ಪ್ರದೇಶಕ್ಕೆ ನೀರು ಹರಿಯಲಿದೆ ಎಂದರು.

ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಕೆರೆಗಳನ್ನು ತುಂಬಿಸುವ ಬೃಹತ್ ಯೋಜನೆಯನ್ನು ಕೈಗೆತ್ತಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿಂತನೆ ನಡೆಸಿದ್ದಾರೆ ಎಂದರು

ಭದ್ರಾವತಿ ಕ್ಷೇತ್ರದ ಶಾಸಕ ಬಿ ಕೆ ಸಂಗಮೇಶ್ವರ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.  ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯೆ ಬಲ್ಕಿಶ್ ಬಾನು, ಪಲ್ಲವಿ, ಶಾಸಕ ಶ್ರೀನಿವಾಸ್ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...