ಬೆಂಗಳೂರು: ರಾಜ್ಯದಲ್ಲಿ ಶಾಲಾ ಶಿಕ್ಷಕರಿಗೆ ವಸ್ತ್ರಸಂಹಿತೆ ಜಾರಿಗೊಳಿಸುವ ಕುರಿತು ವಿಸ್ತೃತ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ಮಂಜುನಾಥ ಭಂಡಾರಿ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಶಾಲಾ ಶಿಕ್ಷಕರ ವಸ್ತ್ರ ಸಂಹಿತೆ ಕುರಿತಾಗಿ ನಿಯಮಗಳು ಇಲ್ಲ. ವಸ್ತ್ರ ಸಂಹಿತೆ ಜಾರಿ ಮಾಡುವಂತಹ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ. ವಸ್ತ್ರ ಸಂಹಿತೆ ಒಳ್ಳೆಯದು ಎನ್ನುವುದಾದರೆ ಎಲ್ಲರೊಂದಿಗೆ ವಿಸ್ತೃತ ಚರ್ಚೆ ನಡೆಸಿದ ನಂತರ ತೀರ್ಮಾನ ಕೈಗೊಳ್ಳಲಾಗುತ್ತದೆ. ಈ ಕುರಿತಾಗಿ ಅವಸರದ ನಿರ್ಧಾರ ಕೈಗೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ.
ಕೋರ್ಟ್ ತಡೆ ಇರುವುದರಿಂದ 13,500 ಶಿಕ್ಷಕರಿಗೆ ನೇಮಕಾತಿ ಆದೇಶ ನೀಡಲು ಸಾಧ್ಯವಿಲ್ಲ. ಕಾನೂನು ತಜ್ಞರೊಂದಿಗೆ ಚರ್ಚೆ ನಡೆಸಲಾಗಿದೆ. ಶೀಘ್ರವೇ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು. 900ಕ್ಕೂ ಹೆಚ್ಚು ವಿಶೇಷ ಶಿಕ್ಷಕರ ನೇಮಕಾತಿಗೂ ಕ್ರಮ ಕೈಗೊಳ್ಳಲಾಗುತ್ತಿದೆ. ಅನುದಾನಿತ ಪ್ರೌಢಶಾಲೆಗಳಲ್ಲಿ ಖಾಲಿ ಇರುವ 3794 ಹುದ್ದೆಗಳ ಭರ್ತಿಗೆ ಅನುಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.