ಬೆಂಗಳೂರು: ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಬೆಂಗಳೂರು ನಗರದ ಫ್ರೀಡಂ ಪಾರ್ಕ್ ನಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಅವರು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಮಸ್ಯೆಗಳನ್ನು ಹಾಗೂ ವಿವಿಧ ಬೇಡಿಕೆಗಳನ್ನು ಆಲಿಸಿ ಪ್ರತಿಭಟನಾ ನಿರತರನ್ನುದ್ದೇಶಿಸಿ ಮಾತನಾಡಿದರು.
ಈಗಾಗಲೇ ನಮ್ಮ ಸರ್ಕಾರ ಕೊಟ್ಟ ಮಾತಿನಂತೆ ನೌಕರರಿಗೆ 7ನೇ ವೇತನ ಜಾರಿಮಾಡಿದೆ. ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಳನ್ನು ಆದಷ್ಟು ಬೇಗ ಈಡೇರಿಸುವಲ್ಲಿ ಚಿಂತನೆ ನಡೆಸುತ್ತಿದೆ. ಕೆಲವು ಕಾನೂನಾತ್ಮಕ ಅಡೆತಡೆಗಳು ಎದುರಾಗಿರುವುದರಿಂದ ತಡವಾಗುತ್ತಿದ್ದು, ಸಮಸ್ಯೆಯ ಕುರಿತು ಮುಖ್ಯಮಂತ್ರಿಗಳ ಗಮನಕ್ಕೆ ತಂದು, ಶೀಘ್ರವಾಗಿ ಚರ್ಚಿಸಿ ಸಕಾರಾತ್ಮಕವಾಗಿ ಸ್ಪಂದಿಸಲಾಗುವುದು ಎಂದು ತಿಳಿಸಿದ್ದಾರೆ.
ವಿಧಾನ ಪರಿಷತ್ ಸದಸ್ಯರಾದ ರಾಮೋಜಿಗೌಡ, ಸಿ.ಟಿ. ರವಿ, ಶಿಕ್ಷಣ ತಜ್ಞ ವಿ.ಪಿ ನಿರಂಜನಾರಾಧ್ಯ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ನಾಗೇಶ್, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ನುಗ್ಗಲಿ ಸೇರಿದಂತೆ ಸಂಘದ ಪದಾಧಿಕಾರಿಗಳುˌ ವಿವಿಧ ಜಿಲ್ಲೆಗಳಿಂದ ಆಗಮಿಸಿದ ಸಾವಿರಾರು ಶಿಕ್ಷಕರು ಉಪಸ್ಥಿತರಿದ್ದರು.