ಬೆಂಗಳೂರು: ಒಳ ಮೀಸಲಾತಿ ಬಗ್ಗೆ ವರದಿ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಂಗಳವಾರ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಕಲ್ಪಿಸುವ ಸಂಬಂಧ ಸಂಪುಟ ಉಪಸಮಿತಿ ರಚಿಸಲಾಗಿದ್ದು, ಸಮಿತಿಯ ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುತ್ತದೆ. ಏಕಾಏಕಿ ಹೋರಾಟ ನಡೆಸುವುದು ಅನಗತ್ಯವಾಗಿದೆ ಎಂದು ತಿಳಿಸಿದ್ದಾರೆ.
ಮೀಸಲಾತಿ ಹೋರಾಟಗಳ ಕುರಿತಾಗಿ ಪ್ರತಿಕ್ರಿಯೆ ನೀಡಿದ ಸಚಿವರು, ಸಂಪುಟ ಉಪ ಸಮಿತಿ ಈಗಾಗಲೇ ಎರಡು ಬಾರಿ ಸಭೆ ನಡೆಸಿದೆ. ಸಭೆಯಲ್ಲಿ ನಡೆದ ಚರ್ಚೆಯ ಬಗ್ಗೆ ಬಹಿರಂಗವಾಗಿ ಮಾತನಾಡಲು ಆಗುವುದಿಲ್ಲ. ಆರಂಭದಲ್ಲಿಯೇ ಹೋರಾಟ ಬೇಡ, ಸಮಿತಿ ವರದಿ ನಂತರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.