ಭೋಪಾಲ್: ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯಲ್ಲಿ ಆಟೋ ಮೇಲೆ ಟ್ರಕ್ ಹತ್ತಿದ ನಂತರ ಸಂಭವಿಸಿದ ರಸ್ತೆ ಅಪಘಾತದಲ್ಲಿ 7 ಜನ ಸಾವನ್ನಪ್ಪಿದ್ದಾರೆ. ಮೂವರು ಗಾಯಗೊಂಡಿದ್ದಾರೆ.
ದೇಹತ್ ಪೊಲೀಸ್ ಠಾಣೆಯ ಸಮಣ್ಣ ಬಳಿ ಈ ಅಪಘಾತ ಸಂಭವಿಸಿದ್ದು, ಕುಟುಂಬವೊಂದು ಆಟೋದಲ್ಲಿ ಬಂದಕ್‌ಪುರಕ್ಕೆ ತೆರಳುತ್ತಿದ್ದಾಗ ಎದುರಿನಿಂದ ವೇಗವಾಗಿ ಬಂದ ಲೋಡರ್ ಟ್ರಕ್ ಅವರಿಗೆ ಡಿಕ್ಕಿ ಹೊಡೆದಿದೆ.
ಗಾಯಾಳುಗಳನ್ನು ರಕ್ಷಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡ ಮೂವರ ಪೈಕಿ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಬಲ್‌ಪುರಕ್ಕೆ ಕಳುಹಿಸಲಾಗಿದೆ.
ಘಟನೆಯ ಸುದ್ದಿ ತಿಳಿದ ನಂತರ ದಮೋಹ್ ಸಂಸದ ರಾಹುಲ್ ಲೋಧಿ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ಮತ್ತು ಆಡಳಿತದೊಂದಿಗೆ ಸಂಪರ್ಕದಲ್ಲಿರುವುದಾಗಿ ಭರವಸೆ ನೀಡಿದರು.
ದಾಮೋಹ್‌ನ ಪೊಲೀಸ್ ಅಧೀಕ್ಷಕ(ಎಸ್‌ಪಿ) ಶ್ರುತ್ ಕೀರ್ತಿ ಸೋಮವಂಶಿ ಅವರು ಅಪಘಾತವನ್ನು ಭಯಾನಕ ಎಂದು ವಿವರಿಸಿದ್ದು, ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
10 ಜನರನ್ನು ಹೊತ್ತೊಯ್ಯುತ್ತಿದ್ದ ಆಟೋರಿಕ್ಷಾಕ್ಕೆ ಟ್ರಕ್ ಡಿಕ್ಕಿ ಹೊಡೆದು ದಮೋಹ್ ಜಿಲ್ಲೆಯ ಸಾಮನ್ನಾ ಎಂಬಲ್ಲಿ ಅಪಘಾತ ಸಂಭವಿಸಿದೆ. ಅವರಲ್ಲಿ 7 ಜನ ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ. ಪ್ರಾಥಮಿಕ ಚಿಕಿತ್ಸೆ ನೀಡಿದ ನಂತರ, ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಬಲ್ಪುರ ವೈದ್ಯಕೀಯ ಕಾಲೇಜಿಗೆ ಕಳುಹಿಸಲಾಗಿದೆ ಎಂದು ಸೋಮವಂಶಿ ತಿಳಿಸಿದ್ದಾರೆ.
ಮುಖ್ಯಮಂತ್ರಿ ಮೋಹನ್ ಯಾದವ್ ಪರಿಹಾರ ಘೋಷಣೆ
ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 2 ಲಕ್ಷ ರೂಪಾಯಿ, ಗಾಯಾಳುಗಳಿಗೆ 50 ಸಾವಿರ ರೂ. ಆರ್ಥಿಕ ನೆರವು ಘೋಷಿಸಿದ್ದಾರೆ. ನಿರ್ಲಕ್ಷ್ಯ ತೋರಿದವರ ವಿರುದ್ಧ ರಾಜ್ಯ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳುತ್ತದೆ ಎಂದು ಹೇಳಿದರು.