ಮುಂಬೈ: ಮಹಾರಾಷ್ಟ್ರ-ಕರ್ನಾಟಕ ಗಡಿ ವಿಚಾರವಾಗಿ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಿರುವ ಹೇಳಿಕೆಯನ್ನು ಖಂಡಿಸುವ ನಿರ್ಣಯವನ್ನು ಮಹಾರಾಷ್ಟ್ರ ವಿಧಾನ ಪರಿಷತ್ತು ಶುಕ್ರವಾರ ಸರ್ವಾನುಮತದಿಂದ ಅಂಗೀಕರಿಸಿತು.
ಎರಡು ರಾಜ್ಯಗಳ ನಡುವಿನ ಗಡಿ ವಿವಾದ ಇನ್ನು ಅಸ್ತಿತ್ವದಲ್ಲಿಲ್ಲ ಎಂದು ಬೊಮ್ಮಾಯಿ ಹೇಳಿದ್ದಾರೆ. ಮಹಾರಾಷ್ಟ್ರ-ಕರ್ನಾಟಕ ಗಡಿ ವಿಚಾರವಾಗಿ ಸಿಎಂ ಬಸವರಾಜ ಬೊಮ್ಮಾಯಿ ಅವರು ನೀಡಿರುವ ಹೇಳಿಕೆ ಖಂಡಿಸಿ ಮಹಾರಾಷ್ಟ್ರ ವಿಧಾನ ಪರಿಷತ್ ನಿರ್ಣಯ ಅಂಗೀಕರಿಸಿದೆ.
ಈ ವಿಷಯ ಪ್ರಸ್ತಾಪಿಸಿದ ಶಿವಸೇನೆ ಶಾಸಕ ದಿವಾಕರ್ ರಾವುಟೆ, ಅಕ್ಕಲಕೋಟೆ ಮತ್ತು ಸೊಲ್ಲಾಪುರದಂತಹ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ನೀಡಲಾಗಿದೆ ಎಂದು ಬೊಮ್ಮಾಯಿ ಹೇಳಿದ್ದಾರೆ. ಬೆಳಗಾವಿ, ಕಾರವಾರ ಮತ್ತು ನೆರೆಯ ಪ್ರದೇಶಗಳನ್ನು ಕರ್ನಾಟಕಕ್ಕೆ ನೀಡಲಾಗಿದೆ ಎಂದು ಸದನಕ್ಕೆ ತಿಳಿಸಿದರು.
ಪರಿಷತ್ ಅಧ್ಯಕ್ಷ ರಾಮರಾಜೇ ನಾಯ್ಕ ನಿಂಬಾಳ್ಕರ್ ಮಾತನಾಡಿ, ಕರ್ನಾಟಕ ಸರ್ಕಾರ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೇಳಿಕೆಯನ್ನು ಖಂಡಿಸಲು ನಾನು ಪ್ರಸ್ತಾವನೆ ಸಲ್ಲಿಸುತ್ತೇನೆ. ಮಹಾರಾಷ್ಟ್ರ ಮತ್ತು ಕರ್ನಾಟಕ ನಡುವಿನ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣ ನಡೆಯುತ್ತಿದ್ದು, ಅವರು ಇಂತಹ ಹೇಳಿಕೆ ನೀಡಬಾರದು. ಆದರೂ, ಪ್ರಕರಣದ ಮೇಲೆ ಪ್ರಭಾವ ಬೀರುವ ಟೀಕೆಗಳನ್ನು ಮಾಡಿದ್ದಾರೆ ಎಂದು ಹೇಳಿದ್ದಾರೆ.