ಮುಂಬೈ: ಕೊರೋನಾ ಲಸಿಕೆ ಬಂದ ನಂತರದಲ್ಲಿ ಸೋಂಕು ಕಡಿಮೆಯಾಗುತ್ತಿದ್ದ ಹೊತ್ತಲ್ಲೇ ಮಹಾರಾಷ್ಟ್ರದಲ್ಲಿ ಸೋಂಕು ತೀವ್ರವಾಗಿ ಏರಿಕೆಯಾಗತೊಡಗಿದೆ.
ಮುಂಬೈ, ಪುಣೆ, ಅಮರಾವತಿ ಸೇರಿದಂತೆ ಮಹಾರಾಷ್ಟ್ರದ ಹಲವೆಡೆ ಕೊರೋನಾ ಪ್ರಕರಣಗಳು ವ್ಯಾಪಕವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹಲವು ನಿರ್ಬಂಧ ಹೇರಿದೆ. ಅಮರಾವತಿ ಜಿಲ್ಲೆಯಲ್ಲಿ ಲಾಕ್ ಡೌನ್ ಜಾರಿ ಮಾಡಲಾಗಿದ್ದು, ಪುಣೆಯಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.
ಫೆಬ್ರವರಿ 28 ರ ವರೆಗೆ ಪುಣೆಯಲ್ಲಿ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ. ಹೋಟೆಲ್, ಬಾರ್, ರೆಸ್ಟೋರೆಂಟ್ ಗಳನ್ನು ರಾತ್ರಿ 11 ರ ನಂತರ ತೆರೆಯುವಂತಿಲ್ಲ. ರಾತ್ರಿ 11 ರಿಂದ ಬೆಳಗ್ಗೆ 6 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ಶಾಲೆ-ಕಾಲೇಜುಗಳು, ತರಬೇತಿ ಕೇಂದ್ರಗಳನ್ನು ಬಂದ್ ಮಾಡುವಂತೆ ಸೂಚಿಸಲಾಗಿದೆ.
ನಾಸಿಕ್ ನಗರದಲ್ಲಿಯೂ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ಅಮರಾವತಿ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ಘೋಷಿಸಲಾಗಿದೆ. ಸೋಮವಾರ ಬೆಳಗ್ಗೆಯಿಂದ ಒಂದು ವಾರ ಜಿಲ್ಲಾದ್ಯಂತ ಲಾಕ್ ಡೌನ್ ಜಾರಿಯಲ್ಲಿರುತ್ತದೆ. ಈ ವೇಳೆ ಅಗತ್ಯ ಸೇವೆಗಳಿಗೆ ಅವಕಾಶ ನೀಡಲಾಗಿದೆ. ಉಳಿದೆಲ್ಲ ಚಟುವಟಿಕೆಗಳು, ಯಾವುದೇ ರಾಜಕೀಯ, ಧಾರ್ಮಿಕ ಸಭೆ ಸಮಾರಂಭಗಳನ್ನು ನಡೆಸದಂತೆ ಸೂಚನೆ ನೀಡಲಾಗಿದೆ.