ಬೆಂಗಳೂರು: ಮುಖ್ಯಮಂತ್ರಿ ಆಯ್ಕೆ ನಿರ್ಧಾರವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಗೆ ವಹಿಸಲಾಗಿದೆ.
ಶಾಸಕಾಂಗ ನಾಯಕನ ಆಯ್ಕೆಗಾಗಿ ಶಾಂಗ್ರಿಲಾ ಹೋಟೆಲ್ ನಲ್ಲಿ ಎಐಸಿಸಿ ವೀಕ್ಷಕರ ಸಮ್ಮುಖದಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ಒಮ್ಮತದ ನಿರ್ಣಯ ಕೈಗೊಳ್ಳಲಾಗಿದೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರ ಆಯ್ಕೆಯನ್ನು ಎಐಸಿಸಿ ಅಧ್ಯಕ್ಷರ ನಿರ್ಧಾರಕ್ಕೆ ಬಿಡಲು ಕಾಂಗ್ರೆಸ್ ಶಾಸಕಾಂಗ ಪಕ್ಷವು ಸರ್ವಾನುಮತದಿಂದ ನಿರ್ಧರಿಸಿದೆ.
ಶಾಸಕರ ಅಭಿಪ್ರಾಯ ಸಂಗ್ರಹಿಸಿ ಉಳಿದ ವಿಚಾರವನ್ನು ಹೈಕಮಾಂಡ್ ತೀರ್ಮಾನಕ್ಕೆ ಬಿಡೋಣ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ.
ಇದಕ್ಕಿಂತ ಮೊದಲು ಸಿದ್ಧರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರೊಂದಿಗೆ ಪ್ರತ್ಯೇಕ ಸಭೆಯಲ್ಲಿ ಮಾತುಕತೆ ನಡೆಸಿದ ಎಐಸಿಸಿ ವೀಕ್ಷಕರು, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ಇಷ್ಟು ದಿನ ಒಗ್ಗಟ್ಟಿನಿಂದ ಕೆಲಸ ಮಾಡಿದ್ದೇವೆ. ಈಗ ಅಧಿಕಾರಕ್ಕೆ ಗೊಂದಲ ಮಾಡಿಕೊಳ್ಳುವುದು ಬೇಡ ಎಂದು ಪ್ರತ್ಯೇಕ ಸಭೆಯಲ್ಲಿ ಸಲಹೆ ನೀಡಿದ್ದಾರೆ.