ಕೊಪ್ಪಳ : ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಸಂಗಾಪುರದ ಪ್ರವೀಣಕುಮಾರ ಭೋವಿ ಎಂಬ ವ್ಯಕ್ತಿಯ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ ನ್ಯಾಯಾಲಯ(ಪೋಕ್ಸೋ) ನ್ಯಾಯಾಧೀಶರಾದ ಕುಮಾರ ಡಿ.ಕೆ ಅವರು ಆರೋಪಿಗೆ 20 ವರ್ಷಗಳ ಜೈಲು ಶಿಕ್ಷೆ ಹಾಗೂ ರೂ.25,000 ಗಳ ದಂಡವನ್ನು ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ.
ಆರೋಪಿಯು ಅಪ್ರಾಪ್ತ ಬಾಲಕಿಯನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ದಿ:23-07-2020 ರಂದು ಕೃಷ್ಣಾಪುರದ ಡಗ್ಗಿ ಗ್ರಾಮದ ಬಾಲಕಿಯ ಮನೆಯ ಹತ್ತಿರ ಹೋಗಿ, ಬಾಧಿತಳನ್ನು ಅಪಹರಿಸಿ ಗಂಗಾವತಿಯಿಂದ ವಿಜಯಪುರದ ಬಸವನಗರ ಆಶ್ರಯ ಕಾಲೋನಿಯ ಆಶ್ರಯ ಮನೆಗೆ ಕರೆದುಕೊಂಡು ಹೋಗಿ, ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಆರೋಪದ ಮೇಲೆ ಗಂಗಾವತಿ ಗ್ರಾಮೀಣ ಪೊಲೀಸರು ದೂರು ದಾಖಲಿಸಿಕೊಂಡಿದ್ದರು. ಪ್ರಕರಣದ ತನಿಖೆಯನ್ನು ಸುರೇಶ ತಳವಾರ ಹಾಗೂ ಗಂಗಾವತಿ ಗ್ರಾಮೀಣ ವೃತ್ತದ ಸಿಪಿಐ ಉದಯರವಿ ಅವರು ನಿರ್ವಹಿಸಿದ್ದು, ಆರೋಪಿತನ ಮೇಲಿನ ಆರೋಪಣೆಗಳು ಮೇಲ್ನೋಟಕ್ಕೆ ಸಾಬೀತಾಗಿದ್ದರಿಂದ ಆರೋಪಿತನ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆಯನ್ನು ನಡೆಸಿದ ನ್ಯಾಯಾಲಯವು ಆರೋಪಿ ಮೇಲಿನ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಜೈಲು ಶಿಕ್ಷೆ ಹಾಗೂ ರೂ.25000 ಗಳ ದಂಡವನ್ನು ವಿಧಿಸಿ ತೀರ್ಪು ನೀಡಿದ್ದು, ದಂಡದ ಮೊತ್ತದಲ್ಲಿ ರೂ.10000 ಗಳನ್ನು ಬಾಧಿತಳಿಗೆ ಪರಿಹಾರವಾಗಿ ನೀಡುವಂತೆ ಆದೇಶಿಸಿದೆ. ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ(ಪೋಕ್ಸೋ) ಗೌರಮ್ಮ ದೇಸಾಯಿ ಅವರು ವಾದ ಮಂಡಿಸಿದ್ದರು ಎಂದು ನ್ಯಾಯಾಲಯದ ಪ್ರಕಟಣೆ ತಿಳಿಸಿದೆ.