ಬೆಂಗಳೂರು: ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿರುವ ಬೆನ್ನಲ್ಲೇ ಮಂಡ್ಯ ಜಿಲ್ಲೆಯಲ್ಲಿ ಪ್ರತಿಭಟನೆ ತೀವ್ರಗೊಂಡಿದ್ದು, ಕನ್ನಡಪರ ಸಂಘಟನೆ ಹಾಗೂ ರೈತ ಸಂಘಟನೆಗಳು ಬೀದಿಗಿಳಿದು ಹೋರಾಟ ನಡೆಸಿವೆ.
ಜಿಲ್ಲಾ ರೈತ ಸಂಘಟನೆ, ಕನ್ನಡಪರ ಸಂಘಟನೆಗಳು ನಾಳೆ ಮಂಡ್ಯ ಜಿಲ್ಲಾ ಬಂದ್ ಗೆ ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ಮಾತನಾಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಪ್ರತಿಭಟನೆ ಮಾಡುವುದು ಅವರ ಹಕ್ಕು, ನಮ್ಮ ತಕರಾರಿಲ್ಲ. ರಾಜ್ಯದ ಹಿತಾಸಕ್ತಿ ರಕ್ಷಣೆಗಾಗಿ ಪ್ರತಿಭಟನೆ ಮಾಡಬಹುದು. ಆದರೆ ಯಾವುದೇ ರೀತಿ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವುಂಟಾಗುವಂತೆ ನಡೆದುಕೊಳ್ಳಬಾರದು ಎಂದು ಹೇಳಿದ್ದಾರೆ.
ಕಾನೂನು ಬಾಹಿರವಾದ ಯಾವುದೇ ಚಟುವಟಿಕೆ ಮಾಡಬಾರದು. ಕಾನೂನು ಬಾಹಿರವಾಗಿ ನಡೆದುಕೊಳ್ಳಲ್ಲ ಎಂಬ ನಂಬಿಕೆಯಿದೆ. ಒಂದು ವೇಳೆ ಇಂತಹ ಘಟನೆ ನಡೆದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಈಗಾಗಲೇ ಮಂಡ್ಯ ಜಿಲ್ಲೆಯ ವಿವಿಧೆಡೆ ಪೊಲೀಸರನ್ನು ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಿದ್ದಾರೆ ಎಂದರು.