ಮಂಡ್ಯ: ಮಂಡ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಸಕ್ಕರೆ ನಾಡು ಮಂಡ್ಯ ಸಂಪೂರ್ಣ ಸಜ್ಜಾಗಿದೆ.
ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮಿಜಿ ಸಾನಿಧ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮೇಳನ ಉದ್ಘಾಟಿಸಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಮ್ಮೇಳನಾಧ್ಯಕ್ಷ ಡಾ.ಗೊ.ರು. ಚೆನ್ನಬಸಪ್ಪ ಉಪಸ್ಥಿತರಿರುವರು.
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್, ಸಚಿವ ಎನ್. ಚಲುವರಾಯಸ್ವಾಮಿ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮಹೇಶ್ ಜೋಶಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.
ಬೆಳಗ್ಗೆ 10:30 ಕ್ಕೆ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ. ಇದಕ್ಕಿಂತ ಮೊದಲು ಬೆಳಿಗ್ಗೆ ಧ್ವಜಾರೋಹಣ, ಸಮ್ಮೇಳನಾಧ್ಯಕ್ಷರ ಮೆರವಣಿಗೆ ನಡೆಯಲಿದೆ. ಸರ್.ಎಂ.ವಿ. ಪ್ರತಿಮೆ ಮುಂಭಾಗದಿಂದ ಮೈಸೂರು -ಬೆಂಗಳೂರು ರಸ್ತೆ ಮಾರ್ಗವಾಗಿ ಸಮ್ಮೇಳನದ ವೇದಿಕೆಗೆ ಸಮ್ಮೇಳನಾಧ್ಯಕ್ಷರ ಮೆರವಣಿಗೆ ತಲುಪಲಿದೆ. ಸಮಾನಾಂತರ ವೇದಿಕೆ 1 ಮತ್ತು 2ರಲ್ಲಿ ಒಟ್ಟು 20 ಗೋಷ್ಠಿಗಳಲ್ಲಿ ಚಿಂತನ, ಮಂಥನ, ಸಂವಾದ ನಡೆಯಲಿದೆ. ಪುಸ್ತಕಗಳ ಬಿಡುಗಡೆ, ಸ್ಮರಣ ಸಂಚಿಕೆ ಬಿಡುಗಡೆ, ವಿಶೇಷ ಅಂಚೆ ಲಕೋಟೆ ಬಿಡುಗಡೆ ಸೇರಿ ಅನೇಕ ಕಾರ್ಯಕ್ರಮಗಳು ನಡೆಯಲಿವೆ.