ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಆಗಬೇಕೆಂಬ ಬೇಡಿಕೆಗೆ ಮತ್ತಷ್ಟು ಬಲ ಬಂದಿದೆ. ಹೋರಾಟ ಸಮಿತಿ ಸಂಚಾಲಕ ಐವನ್ ಡಿಸೋಜಾ ನೇತೃತ್ವದಲ್ಲಿ ಹಲವು ಪ್ರಮುಖರನ್ನು ಭೇಟಿ ಮಾಡಿ ಚರ್ಚೆ ನಡೆಸಲಾಗಿದೆ.
ಕೊಣಾಜೆಯ ಮಂಗಳೂರು ವಿವಿ ಅತಿಥಿ ಗೃಹದಲ್ಲಿ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವರನ್ನು ಹೋರಾಟ ಸಮಿತಿಯ ನಿಯೋಗ ಭೇಟಿ ಮಾಡಿ ಚರ್ಚೆ ನಡೆಸಿದೆ. ಸರ್ಕಾರಿ ಅತಿಥಿ ಗೃಹದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ, ಮಂಗಳೂರುವಿವಿ ಕುಲಪತಿ ಪ್ರೊ. ಪಿ.ಎಲ್. ಧರ್ಮ ಅವರನ್ನು ನಿಯೋಗದ ಸದಸ್ಯರು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಹೆಚ್.ವಿ. ರಾಘವೇಂದ್ರ, ಪೃಥ್ವಿರಾಜ್ ರೈ, ಶ್ರೀಧರ್ ಹೆಚ್., ಗಿರೀಶ್ ಶೆಟ್ಟಿ ಸೇರಿದಂತೆ ಹಲವು ಪ್ರಮುಖರು ನಿಯೋಗದಲ್ಲಿದ್ದರು.
ಹುಬ್ಬಳ್ಳಿ –ಧಾರವಾಡ, ಕಲಬುರಗಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಮಾಡಲಾಗಿದ್ದು, ಅದೇ ರೀತಿ ಎಲ್ಲಾ ರೀತಿಯ ಸಂಪರ್ಕ ವ್ಯವಸ್ಥೆ ಇರುವ ಮಂಗಳೂರು ಕೇಂದ್ರೀಕರಿಸಿ ಹೈಕೋರ್ಟ್ ಪೀಠ ಸ್ಥಾಪನೆ ಮಾಡಬೇಕೆಂದು ಬೇಡಿಕೆ ಇಟ್ಟಿದ್ದೇವೆ. ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯಿಂದ ಎಲ್ಲಾ ಭಾಗದ ಕಕ್ಷಿದಾರರಿಗೆ ಅನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ಗಣ್ಯರೊಂದಿಗೆ ಚರ್ಚೆ ನಡೆಸಿದ್ದೇವೆ ಎಂದು ವಕೀಲರ ಸಂಘದ ಅಧ್ಯಕ್ಷ ಹೆಚ್.ವಿ. ರಾಘವೇಂದ್ರ ತಿಳಿಸಿದ್ದಾರೆ.
ಅ. 17ರಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಹೆಚ್.ಕೆ. ಪಾಟೀಲ್ ಅವರನ್ನು ಭೇಟಿಯಾಗುವ ಬಗ್ಗೆ ಚರ್ಚೆ ನಡೆದಿದೆ. ನಂತರ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳನ್ನು ಕೂಡ ಭೇಟಿಯಾಗುವ ಉದ್ದೇಶವಿದೆ. ಮಂಗಳೂರಿನಲ್ಲಿ ಹೈಕೋರ್ ಪೀಠ ಸ್ಥಾಪನೆ ಬಗ್ಗೆ ಮಂಗಳೂರು ವಕೀಲರ ಸಂಘದ ಸದಸ್ಯರಾಗಿರುವ ಸ್ಪೀಕರ್ ಯು.ಟಿ. ಖಾದರ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಹೇಳಿದ್ದಾರೆ.