ಮಂಗಳೂರು: ಮಂಗಳೂರಿನಲ್ಲಿ ಚಾಕು ಇರಿತದಿಂದ ವ್ಯಕ್ತಿ ಮೃತಪಟ್ಟ ಘಟನೆ ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಕೃಷ್ಣಾಪುರ ನೈತಂಗಡಿ ಸಮೀಪ ನಡೆದಿದೆ.
ಕೃಷ್ಣಾಪುರದ ಅಬ್ದುಲ್ ಜಲೀಲ್(44) ಮೃತಪಟ್ಟ ವ್ಯಕ್ತಿ ಎಂದು ಹೇಳಲಾಗಿದ್ದು, ಘಟನೆಯ ನಂತರ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಪೊಲೀಸರು ತಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.
ಚಾಕು ಇರಿತಕ್ಕೆ ಒಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ಜಲೀನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಹತ್ಯೆಯಾದ ಅಬ್ದುಲ್ ಜಲೀಲ್ ಫ್ಯಾನ್ಸಿ ಸ್ಟೋರ್ ನಡೆಸುತ್ತಿದ್ದರು ಎಂದು ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಹೇಳಿದ್ದಾರೆ. ಅಬ್ದುಲ್ ಜಲೀಲ್ ಅವರಿಗೆ ಇಬ್ಬರು ಚೂರಿ ಇರಿದು ಪರಾರಿಯಾಗಿದ್ದಾರೆ. ಅವರ ಹತ್ಯೆ ಹಿಂದಿನ ಉದ್ದೇಶ ಏನು ಎಂಬುದು ಸ್ಪಷ್ಟವಾಗಿಲ್ಲ. ಸ್ಥಳೀಯರು ಕೆಲವು ಅನುಮಾನ ವ್ಯಕ್ತಪಡಿಸಿದ್ದು, ಪರಿಶೀಲಿಸುತ್ತೇವೆ ಘಟನೆ ನಡೆದಿರುವ ಸ್ಥಳ ಹಿಂದಿನಿಂದಲೂ ಅತ್ಯಂತ ಸೂಕ್ಷ್ಮ ಪ್ರದೇಶವಾಗಿದೆ. ಹೀಗಾಗಿ ಮುಂಜಾಗ್ರತೆ ಕ್ರಮವಾಗಿ ಹೆಚ್ಚುವರಿ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಕ್ರಿಸ್ಮಸ್ ಇರುವ ಕಾರಣ ಅಗತ್ಯವಾದರೆ ನಿಷೇಧಾಜ್ಞೆ ಜಾರಿ ಮಾಡಲಾಗುವುದು. ಹೆಚ್ಚುವರಿ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗುವುದು ಸ್ಥಳೀಯ ಮುಖಂಡರೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಡಿಸೆಂಬರ್ ತಿಂಗಳಲ್ಲಿ ಹಲವು ಗೂಂಡಾಗಿರಿ ಪ್ರಕರಣಗಳು ನಡೆದಿವೆ. ಎಲ್ಲ ಘಟನೆ ಸಂಬಂಧ ಪ್ರಕರಣ ದಾಖಲಿಸಿ ಆರೋಪಿಗಳನ್ನು ಬಂಧಿಸಲಾಗಿದೆ. ಕಳೆದ ಒಂದು ವಾರದಿಂದ ಇಂತಹ ಕೃತ್ಯದಲ್ಲಿ ಭಾಗಿಯಾದವರ ಮೇಲೆ ಕ್ರಮ ಕೈಗೊಳ್ಳಲಾಗಿದೆ. ಮುಂದೆ ಇಂತಹ ಕೃತ್ಯ ನಡೆಯದಂತೆ ಮುಂಜಾಗ್ರತೆ ವಹಿಸಲಾಗಿದೆ ಎಂದು ಹೇಳಿದ್ದಾರೆ.