ಕೊಪ್ಪಳ: ಯಲಬುರ್ಗಾ ತಾಲ್ಲೂಕಿನ ಗ್ರಾಮವೊಂದರಲ್ಲಿ ಯುವತಿಯನ್ನು ಆಕೆಯ ಪ್ರಿಯಕರನೇ ಕೊಲೆ ಮಾಡಿ ಕೊಳವೆ ಬಾವಿಯಲ್ಲಿ ಮೃತದೇಹ ಹೂತು ಹಾಕಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಯಲಬುರ್ಗಾ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮೃತ ಯುವತಿಯ ಸಂಬಂಧಿಯೇ ಆಗಿರುವ ಯುವಕ ಆಕೆಯನ್ನು ಮನೆಯಲ್ಲಿ ಇಟ್ಟುಕೊಂಡಿದ್ದ. ಇನ್ನೆರಡು ತಿಂಗಳಲ್ಲಿ 18 ವರ್ಷ ಪೂರ್ಣವಾದ ನಂತರ ಆಕೆಯನ್ನು ಮದುವೆಯಾಗಲು ಸಿದ್ಧತೆ ನಡೆಸಿದ್ದ. ಈ ನಡುವೆ ಇಬ್ಬರ ನಡುವೆ ಜಗಳವಾಗುತ್ತಿತ್ತು ಎನ್ನಲಾಗಿದೆ.
15 ದಿನಗಳ ಹಿಂದೆ ಜಗಳ ವಿಕೋಪಕ್ಕೆ ತಿರುಗಿ ಆಕೆಯನ್ನು ಕೊಲೆ ಮಾಡಿದ್ದಾನೆ. ಬಳಿಕ ಮೃತದೇಹವನ್ನು ಕೆರೆ ಸಮೀಪದ ಜಮೀನೊಂದರ ವಿಫಲ ಕೊಳವೆಬಾವಿಯಲ್ಲಿ ಹೂತು ಹಾಕಿದ್ದಾನೆ. ತನಿಖೆ ಕೈಗೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ವಿಫಲ ಕೊಳವೆ ಬಾವಿಯಲ್ಲಿ ಹೂತು ಹಾಕಿದ್ದ ಮೃತದೇಹವನ್ನು ಜೆಸಿಬಿಯಿಂದ ಹೊರ ತೆಗೆಯಲಾಗಿದೆ ಎಂದು ಹೇಳಲಾಗಿದೆ.