ಬೆಂಗಳೂರು: ನೂತನ ವಿಮಾನ ನಿಲ್ದಾಣ ನಿರ್ಮಿಸಲು ಆರು ಸ್ಥಳಗಳ ಪರಿಶೀಲನೆ ನಡೆಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.
ವಿಧಾನ ಪರಿಷತ್ ನಲ್ಲಿ ಬಿಜೆಪಿ ಸದಸ್ಯ ಕೆ.ಎಸ್. ನವೀನ್ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, 2033ರ ನಂತರ ಪ್ರಯಾಣಿಕರ ಸಂಖ್ಯೆ ಹೆಚ್ಚಳ, ಸರಕು ಸಾಗಣೆ ಪ್ರಮಾಣ, ಜನರಿಗೆ ಆಗುವ ಅನುಕೂಲ ಸೇರಿ ವಿವಿಧ ಮಾನದಂಡಗಳನ್ನು ಆಧರಿಸಿ ಬೆಂಗಳೂರಿನಿಂದ 60 ರಿಂದ 70 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಹೊಸದಾಗಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ಹೇಳಿದ್ದಾರೆ.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 2035 ರ ವೇಳೆಗೆ ಪ್ರಯಾಣಿಕರ ಸಂಖ್ಯೆ 110 ದಶ ಲಕ್ಷ ದಾಟಲಿದೆ. ಸರಕು ಸಾಗಾಣಿ ಸಹ ಹೆಚ್ಚಾಗಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ ಅಗತ್ಯವಿದ್ದು, ಈಗಾಗಲೇ ಆರೇಳು ಸ್ಥಳಗಳನ್ನು ಗುರುತಿಸಲಾಗಿದೆ. ಅಂತಿಮವಾಗಿ ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ಸೇರಿದಂತೆ ತಜ್ಞರ ಅಭಿಪ್ರಾಯ ಆಧರಿಸಿ ವಿಮಾನ ನಿಲ್ದಾಣ ನಿರ್ಮಿಸಲಾಗುವುದು. ಈಗಿನಿಂದಲೇ ಪೂರ್ವ ಸಿದ್ಧತೆ ಮಾಡಿಕೊಂಡಲ್ಲಿ ವಿಮಾನ ನಿಲ್ದಾಣ ಸಾಧ್ಯವಿದೆ ಎಂದು ಹೇಳಿದ್ದಾರೆ.