ತುಮಕೂರು: ತುಮಕೂರು ಜಿಲ್ಲೆ ಶಿರಾ ತಾಲೂಕು ತರೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟ ತಯಾರಿಸುವ ವೇಳೆ ಸಾಂಬಾರು ಪಾತ್ರೆಯೊಳಗೆ ಬಿದ್ದು 8 ವರ್ಷದ ಬಾಲಕಿ ಗಾಯಗೊಂಡಿದ್ದಾಳೆ.
ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಗಾಯಗೊಂಡ ಬಾಲಕಿಯನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ಈ ಕುರಿತು ದೂರು ನೀಡಲಾಗಿದ್ದು, ಆಯೋಗದ ಅಧ್ಯಕ್ಷ ಕೆ. ನಾಗಣ್ಣಗೌಡ, ಸದಸ್ಯರಾದ ಡಾ.ಕೆ.ಟಿ. ತಿಪ್ಪೇಸ್ವಾಮಿ, ಮಂಜು ಅವರು ಇತ್ತೀಚೆಗೆ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ಆರೋಗ್ಯ ವಿಚಾರಿಸಿದ್ದಾರೆ.
ಬಾಲಕಿಯ ಶೇಕಡ 22ರ ಭಾಗದಷ್ಟು ಚರ್ಮ ಸುಟ್ಟಿದ್ದು, ಪ್ಲಾಸ್ಟಿಕ್ ಸರ್ಜರಿ ಅಗತ್ಯವಿದೆ ಎಂದು ವೈದ್ಯರು ಶಿಫಾರಸು ಮಾಡಿದ್ದಾರೆ. ಬಡ ಕುಟುಂಬಕ್ಕೆ ಸೇರಿದ ಬಾಲಕಿಯ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಬೇಕೆಂದು ಒತ್ತಾಯಿಸಲಾಗಿದೆ. ಶಾಲೆಯ ನಾಲ್ವರ ವಿರುದ್ಧ ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.