ಬೆಂಗಳೂರು: ಕೊರೋನಾ ಲಾಕ್ ಡೌನ್ ಕಾರಣದಿಂದ ಸರ್ಕಾರಿ ಶಾಲೆ, ಅಂಗನವಾಡಿ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆ ಸ್ಥಗಿತಗೊಳಿಸಲಾಗಿದೆ.
ಇದಕ್ಕೆ ಪರಿಹಾರವಾಗಿ ಹೆಚ್ಚುವರಿ ಪಡಿತರ ನೀಡಿದರೆ ಸಾಲದು, ಪರಿಹಾರ ಭತ್ಯೆ ನೀಡಬೇಕೆಂದು ಹೈಕೋರ್ಟ್ ಸರ್ಕಾರಕ್ಕೆ ಆದೇಶಿಸಿದೆ. ಬಿಸಿಯೂಟ ಯೋಜನೆ ಸ್ಥಗಿತಗೊಳಿಸಿರುವುದು ಸರ್ಕಾರದಿಂದ ಮೂಲಭೂತ ಹಕ್ಕಿನ ಉಲ್ಲಂಘನೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಮಕ್ಕಳಿಗೆ ಪಡಿತರ ನೀಡಲಾಗುತ್ತಿದೆ ಎಂಬ ಸರ್ಕಾರದ ವಾದವನ್ನು ಒಪ್ಪದ ಹೈಕೋರ್ಟ್ ಪೀಠ, ಪರಿಹಾರ ಭತ್ಯೆಯನ್ನು ಕೊಡಬೇಕೆಂದು ಆದೇಶಿಸಿದೆ. ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠದಲ್ಲಿ ವಿಚಾರಣೆ ನಡೆದು, ಬಿಸಿಯೂಟ ಯೋಜನೆಯಡಿ ಮಕ್ಕಳಿಗೆ ಊಟ ನೀಡದೆ ಅವರ ಮೂಲಭೂತ ಹಕ್ಕನ್ನು ಸರ್ಕಾರ ಉಲ್ಲಂಘಿಸಿದೆ ಎಂದು ಅಭಿಪ್ರಾಯಪಟ್ಟಿದೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಪರವಾಗಿ ಸರ್ಕಾರಿ ವಕೀಲರಾದ ಉಮಾಶಂಕರ ಹುಯಿಲಗೋಳ ಪ್ರಮಾಣಪತ್ರ ಸಲ್ಲಿಸಿದ್ದು, ಶಾಲಾ ಮಕ್ಕಳಿಗೆ ನಿಗದಿತ ಪ್ರಮಾಣದಲ್ಲಿ ಪಡಿತರ ವಿತರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.