ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕು ತೀವ್ರ ಏರುಗತಿಯಲ್ಲಿ ಸಾಗಿದೆ. ಒಮಿಕ್ರಾನ್ ರೂಪಾಂತರಿ ಬಳಿಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗುತ್ತಿದೆ. ಇಂತಹ ಸಂದರ್ಭದಲ್ಲಿ ಕೊರೋನಾ ನಿರೋಧಕ ಲಸಿಕೆಗಳನ್ನು ಮುಕ್ತ ಮಾರುಕಟ್ಟೆಯಲ್ಲಿ ಸಿಗುವಂತೆ ಮಾಡಲು ಕ್ರಮಕೈಗೊಳ್ಳಲಾಗಿದೆ.
ಕೋವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಲಸಿಕೆಗಳು ಶೀಘ್ರವೇ ಮುಕ್ತ ಮಾರುಕಟ್ಟೆ ಪ್ರವೇಶಿಸಲಿವೆ. ಕೇಂದ್ರೀಯ ಔಷಧ ಪ್ರಾಧಿಕಾರದ ತಜ್ಞರ ಸಮಿತಿ ಮೆಡಿಕಲ್ಸ್ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೋವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಲಸಿಕೆಗಳು ಲಭ್ಯವಾಗಿಸಲು ಕ್ರಮ ಕೈಗೊಂಡಿದೆ. ಈ ನಿಟ್ಟಿನಲ್ಲಿ ಕೇಂದ್ರೀಯ ಔಷಧ ಪ್ರಾಧಿಕಾರ ತಜ್ಞರ ಸಮಿತಿ ಒಪ್ಪಿಗೆ ನೀಡಿದ್ದು, ಇದಾದ ಬಳಿಕ ಲಸಿಕೆಗಳನ್ನು ತಯಾರಿಸುವ ಸೀರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಮತ್ತು ಭಾರತ್ ಬಯೋಟೆಕ್ ಕಂಪನಿಗಳ ವತಿಯಿಂದ ಔಷಧಿಗಳ ಗುಣಮಟ್ಟ ನಿಯಂತ್ರಣ ಪ್ರಾಧಿಕಾರದ ಅನುಮತಿಗಾಗಿ ಅರ್ಜಿ ಸಲ್ಲಿಸಲಾಗಿದೆ.
ತುರ್ತು ಪರಿಸ್ಥಿತಿಯಲ್ಲಿ ಕೊರೋನಾ ನಿರೋಧಕ ಲಸಿಕೆ ಬಳಕೆಗೆ ಅನುಮತಿ ನೀಡಲಾಗಿದೆ. ಇದನ್ನು ಮಾರುಕಟ್ಟೆಗಳಲ್ಲಿ ಮಾರಾಟ ಮಾಡುವಂತಿಲ್ಲ. ಈಗ ಕೇಂದ್ರೀಯ ಔಷಧ ಪ್ರಾಧಿಕಾರದ ತಜ್ಞರ ಸಮಿತಿ ಒಪ್ಪಿಗೆ ನೀಡಿರುವುದರಿಂದ DGCI ಅನುಮತಿ ದೊರೆತರೆ ಶೀಘ್ರವೇ ಮೆಡಿಕಲ್ ಸ್ಟೋರ್ ಗಳಲ್ಲಿಯೂ ಲಸಿಕೆ ಲಭ್ಯವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.