ವಿಜಯಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ ಬಗ್ಗೆ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಪ್ರತಿಕ್ರಿಯೆ ನೀಡಿದ್ದಾರೆ.
ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ವರಿಷ್ಠರ ಸೂಚನೆ ಮೇರೆಗೆ ಸಿಎಂ ಬೊಮ್ಮಾಯಿ ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೇಳಿದಂತೆ ಮುಖ್ಯಮಂತ್ರಿ ಬೊಮ್ಮಾಯಿ ಕೇಳದಿದ್ದರೆ ಸರ್ಕಾರವನ್ನು ಅಸ್ಥಿರಗೊಳಿಸುವ ಸಾಧ್ಯತೆ ಇದೆ. ಅಂತಹ ಸಂದರ್ಭ ಎದುರಾದರೆ ಜೆಡಿಎಸ್ ಬೆಂಬಲ ಪಡೆಯಲಾಗುವುದು. ಇಂತಹ ಸಂದೇಶ ತಿಳಿಸುವ ಉದ್ದೇಶದಿಂದ ದೇವೇಗೌಡರನ್ನು ಭೇಟಿ ಮಾಡಲಾಗಿದ್ದು, ಬೊಮ್ಮಾಯಿ ಅವರ ಸರ್ಕಾರಕ್ಕೆ ಸಂಕಷ್ಟ ಎದುರಾದ ಸಂದರ್ಭದಲ್ಲಿ ಪಕ್ಷ ಬೆಂಬಲಿಸಲಿದೆ ಎಂದು ದೇವೇಗೌಡರು ಹೇಳಿದ್ದಾರೆ ಎಂದರು.
ಅಲ್ಲದೆ, ಬೊಮ್ಮಾಯಿ ಅವರ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡಬಾರದು. ಬಿಜೆಪಿಯಲ್ಲಿ ಎರಡನೇ ಹಂತದ ನಾಯಕತ್ವ ಬೆಳೆದಿದ್ದು, ಯಡಿಯೂರಪ್ಪ ಸರ್ಕಾರಕ್ಕೆ ಅಗತ್ಯವಾದ ಸಲಹೆ, ಸಹಕಾರ, ಮಾರ್ಗದರ್ಶನ ನೀಡಲಿ ಎಂದು ಯತ್ನಾಳ್ ಹೇಳಿದ್ದಾರೆ.