ಬೆಂಗಳೂರು: ಕೇಂದ್ರ ಸರ್ಕಾರ ಮತ್ತು ದೇಶದ ಸಮಸ್ಯೆಗಳ ಬಗ್ಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರೊಂದಿಗೆ ಚರ್ಚೆ ನಡೆಸಿದ್ದೇನೆ ಎಂದು ತೆಲಂಗಾಣ ಸಿಎಂ ಕೆ. ಚಂದ್ರಶೇಖರರಾವ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಇಂದು ದೇವೇಗೌಡರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ ನಂತರ ಮಾತನಾಡಿದ ಅವರು, ಉಜ್ವಲ ಭಾರತ ನಮಗೆ ಬೇಕಿದೆ. ಇದರ ಬಗ್ಗೆ ಗಮನಹರಿಸಬೇಕು ಎಂದು ಹೇಳಿದ್ದಾರೆ.
ಭರವಸೆಗಳನ್ನು ಸಾಕಷ್ಟು ಕೊಡಬಹುದು, ಇದನ್ನು ಈಡೇರಿಸಿದ್ದಾರಾ? ಯುವಕರಿಗೆ ಉದ್ಯೋಗ ಕೊಟ್ಟಿದ್ದಾರೆಯೇ? ದೇಶದಲ್ಲಿ ಎಲ್ಲವೂ ಸಮಸ್ಯೆಗಳೇ ಎಂದು ಪ್ರಧಾನಿ ಮೋದಿ ವಿರುದ್ಧ ಚಂದ್ರಶೇಖರ ರಾವ್ ವಾಗ್ದಾಳಿ ನಡೆಸಿದ್ದು. ಶೀಘ್ರವೇ ದೇಶದಲ್ಲಿ ಬದಲಾವಣೆ ಆಗಲಿದೆ. ಈ ನಿಟ್ಟಿನಲ್ಲಿ ನಾವೆಲ್ಲರೂ ಸೇರಿ ಪ್ರಯತ್ನ ನಡೆಸುತ್ತಿದ್ದೇವೆ ಎಂದರು.
ಕರ್ನಾಟಕದ ರಾಜಕೀಯದ ಬಗ್ಗೆಯೂ ನನಗೆ ಗೊತ್ತಿದೆ. ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದೆ ಎಂದು ಅವರು ಹೇಳಿದ್ದಾರೆ.
ತೃತೀಯ ರಂಗ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ದೇವೇಗೌಡರೊಂದಿಗೆ ಕೆಸಿಆರ್ ಸುದೀರ್ಘ ಚರ್ಚೆ ನಡೆಸಿದ್ದು, ಈ ಸಂದರ್ಭದಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಇದ್ದರು.