ಬೆಳಗಾವಿ: ಮುಡಾ ಹಗರಣದ ವಿರುದ್ಧ ಬಿಜೆಪಿ –ಜೆಡಿಎಸ್ ಮೈಸೂರು ಚಲೋ ಪಾದಯಾತ್ರೆ ನಡೆಸಿದ್ದು, ಇದರ ಬೆನ್ನಲ್ಲೇ ಬಿಜೆಪಿಯ ಅತೃಪ್ತ ನಾಯಕರು ಬಳ್ಳಾರಿಗೆ ಪಾದಯಾತ್ರೆ ಕೈಗೊಂಡಿದ್ದಾರೆ.
ಸೆಪ್ಟಂಬರ್ 17ರಿಂದ ಕೂಡಲಸಂಗಮದಿಂದ ಆರಂಭವಾಗುವ ಪಾದಯಾತ್ರೆ ಬಳ್ಳಾರಿವರೆಗೂ ನಡೆಸಲು ಉದ್ದೇಶಿಸಲಾಗಿದೆ. ಬೆಳಗಾವಿ ಹೊರವಲಯದ ಖಾಸಗಿ ರೆಸಾರ್ಟ್ ವೊಂದರಲ್ಲಿ ಭಾನುವಾರ ಬಿಜೆಪಿ ನಾಯಕರಾದ ಬಸನಗೌಡ ಪಾಟೀಲ ಯತ್ನಾಳ್, ರಮೇಶ್ ಜಾರಕಿಹೊಳಿ, ಜಿ.ಎಂ. ಸಿದ್ದೇಶ್ವರ್, ಅಣ್ಣಾ ಸಾಹೇಬ್ ಜೊಲ್ಲೆ, ಅರವಿಂದ ಲಿಂಬಾವಳಿ, ಪ್ರತಾಪ ಸಿಂಹ, ಕುಮಾರ್ ಬಂಗಾರಪ್ಪ ಸೇರಿ ಅನೇಕ ನಾಯಕರು ರಹಸ್ಯ ಸಭೆ ನಡೆಸಿದ್ದಾರೆ.
ಕಾಂಗ್ರೆಸ್ ನ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅನುದಾನ ದುರ್ಬಳಕೆ ವಿರುದ್ಧ ಹೋರಾಟ ಕೈಗೊಳ್ಳಲು ನಾಯಕರು ಚರ್ಚೆ ನಡೆಸಿದ್ದು, ಮುಡಾ ಹಗರಣದಲ್ಲಿ ಬಿಜೆಪಿ ನಾಯಕರು ಹೊಂದಾಣಿಕೆ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ.
ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಲು ಇವರೆಲ್ಲರೂ ಸೇರಿ ಒಂದಾಗಿದ್ದಾರೆ ಎಂದು ಹೈಕಮಾಂಡ್ ಗೆ ಸಂದೇಶ ರವಾನಿಸಲು ಅತೃಪ್ತ ನಾಯಕರು ಚರ್ಚೆ ನಡೆಸಿದ್ದಾರೆ. ಕಾಂಗ್ರೆಸ್ ವಿರುದ್ಧದ ಹೋರಾಟದ ನೆಪದಲ್ಲಿ ತಮ್ಮದೇ ಪಕ್ಷದ ನಾಯಕರ ವಿರುದ್ಧ ಅತೃಪ್ತ ನಾಯಕರು ಬಂಡೆದ್ದಿದ್ದಾರೆ ಎನ್ನಲಾಗಿದೆ.