![](https://kannadadunia.com/wp-content/uploads/2020/12/Night-curfew.jpg)
ಬೆಂಗಳೂರು: ರಾಜ್ಯದಲ್ಲಿ ಮತ್ತೆ ನೈಟ್ ಕರ್ಫ್ಯೂ ಜಾರಿಯಾಗುವ ಸಾಧ್ಯತೆಯಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಾಳೆ ಬೆಳಿಗ್ಗೆ 9 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಯಲಿದ್ದು, ಆರೋಗ್ಯ ಸಚಿವರು, ಗೃಹ ಸಚಿವರು, ಹಿರಿಯ ಅಧಿಕಾರಿಗಳು, ಬಿಬಿಎಂಪಿ ಆಯುಕ್ತರು, ತಜ್ಞರು, ಪೊಲೀಸ್ ಅಧಿಕಾರಿಗಳು ಭಾಗಿಯಾಗಲಿದ್ದಾರೆ.
ಎಲ್ಲರೊಂದಿಗೆ ಚರ್ಚೆ ನಡೆಸಿದ ಬಳಿಕ ಕರ್ಫ್ಯೂ ಬಗ್ಗೆ ಘೋಷಣೆ ಮಾಡುವ ಸಾಧ್ಯತೆ ಇದೆ. ಅಲ್ಲದೇ ನಾಳೆಯೇ ಹೊಸ ಮಾರ್ಗಸೂಚಿ ಪ್ರಕಟಿಸುವ ಸಾಧ್ಯತೆ ಕೂಡ ಇದೆ ಎಂದು ಹೇಳಲಾಗಿದೆ.
ಈಗಾಗಲೇ ಅನೇಕ ರಾಜ್ಯಗಳಲ್ಲಿ ಕೊರೋನಾ, ಒಮಿಕ್ರಾನ್ ಸೋಂಕು ತಡೆಯುವ ಉದ್ದೇಶದಿಂದ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದಲ್ಲಿಯೂ ನೈಟ್ ಕರ್ಫ್ಯೂ ಜಾರಿ ಬಗ್ಗೆ ನಾಳಿನ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಬಹುದು ಎಂದು ಹೇಳಲಾಗಿದೆ.
ನಾಳೆ ಸಂಜೆ 6 ಗಂಟೆಗೆ ಬದಲಿಗೆ ಬೆಳಗ್ಗೆ 9 ಗಂಟೆಗೆ ಮುಖ್ಯಮಂತ್ರಿ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಲಾಗುತ್ತದೆ. ಸಭೆ ಬಳಿಕ ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಬಿಡುಗಡೆ ಮಾಡುವ ನಿರೀಕ್ಷೆ ಇದೆ. ನೈಟ್ ಕರ್ಫ್ಯೂ ಬಗ್ಗೆಯೂ ಚರ್ಚಿಸಿ ತೀರ್ಮಾನ ಕೈಗೊಳ್ಳಬಹುದಾಗಿದೆ.
ಸಿಎಂ ಹುಬ್ಬಳ್ಳಿ ಮತ್ತು ವಿಜಯಪುರದಲ್ಲಿ ಕಠಿಣ ನಿಯಮ ಜಾರಿಗೊಳಿಸುವ ಬಗ್ಗೆ ಸುಳಿವು ನೀಡಿದ್ದಾರೆ. ನೈಟ್ ಕರ್ಫ್ಯೂ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದು, ಹೊಸ ವರ್ಷಾಚರಣೆಗೆ ಬ್ರೇಕ್ ಬೀಳಲಿದೆ ಎಂದು ಹೇಳಲಾಗಿದೆ.