ಬೆಂಗಳೂರು: ವಿಜಯಪುರ ಜಿಲ್ಲೆಯಲ್ಲಿ ರೈತರ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಿರುವುದು ವಿವಾದಕ್ಕೆ ಕಾರಣವಾಗಿರುವ ಬೆನ್ನಲ್ಲೇ ಮತ್ತೆ ಎರಡು ಜಿಲ್ಲೆಗಳಲ್ಲಿಯೂ ಇದೇ ರೀತಿಯ ಪ್ರಕರಣ ಬೆಳಕಿಗೆ ಬಂದಿದೆ.
ಯಾದಗಿರಿ ಮತ್ತು ಧಾರವಾಡ ಜಿಲ್ಲೆಯ ರೈತರ ಭೂಮಿಯ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಲಾಗಿದ್ದು, ರೈತರಲ್ಲಿ ಆತಂಕ, ಆಕ್ರೋಶಕ್ಕೆ ಕಾರಣವಾಗಿದೆ.
ಯಾದಗಿರಿಯಲ್ಲಿ 1440 ರೈತರ ಜಮೀನು, ಧಾರವಾಡದ ಉಪ್ಪಿನ ಬೆಟಗೇರಿಯಲ್ಲಿ ಕೆಲವು ರೈತರ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಲಾಗಿದೆ. ಯಾದಗಿರಿ ಜಿಲ್ಲೆಯಲ್ಲಿ 1440 ರೈತರ ಜಮೀನುಗಳ ಪಹಣಿ ಕಾಲಂ 11 ರಲ್ಲಿ ದಿಢೀರನೆ ವಕ್ಫ್ ಮಂಡಳಿ ಬೆಂಗಳೂರು ಎಂದು ನಮೂದಿಸಲಾಗಿದೆ. ರೈಲ್ವೆ ಯೋಜನೆ, ಹೆದ್ದಾರಿ, ಕೈಗಾರಿಕಾ ಪ್ರದೇಶಕ್ಕೆ ಭೂಮಿ ಸ್ವಾಧೀನ ಮಾಡಿಕೊಂಡ ಈ ಜಾಗದ ಮಾಲೀಕರಿಗೆ ಪರಿಹಾರ ನೀಡುವಾಗ ವಕ್ಫ್ ಆಸ್ತಿ ಎಂದು ಪಹಣಿಯಲ್ಲಿ ನಮೂದಾಗಿರುವುದು ಬೆಳಕಿಗೆ ಬಂದಿದೆ.
ಧಾರವಾಡದ ಉಪ್ಪಿನ ಬೆಟಗೇರಿ ಗ್ರಾಮದ ಕೆಲವು ರೈತರ ಜಮೀನು ಪಹಣಿ ಕಾಲಂ 11ರಲ್ಲಿ ವಕ್ಫ್ ಮಂಡಳಿ ಹೆಸರು ಇರುವುದು ಗೊತ್ತಾಗಿದೆ. 2018 -19 ರ ಪಹಣಿಯಲ್ಲಿ ವಕ್ಫ್ ಹೆಸರು ಉಲ್ಲೇಖವಿಲ್ಲ. ಇದು ಪೂರ್ವಜರಿಂದ ಬಂದ ಆಸ್ತಿಯಾಗಿದೆ. ಆದರೆ ಏಕಾಏಕಿ ಇದೀಗ ವಕ್ಫ್ ಆಸ್ತಿ ಎಂದು ನಮೂದಿಸಿ ಜಮೀನು ಕಬಳಿಸುವ ಹುನ್ನಾರ ನಡೆದಿದೆ ಎಂದು ರೈತರು ಆರೋಪಿಸಿದ್ದಾರೆ.