ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ಕರ್ತವ್ಯನಿರತ ಲೈನ್ ಮೆನ್ ಮೇಲೆ ಗ್ರಾಮಾಂತರ ಠಾಣೆ ಪೊಲೀಸ್ ನಿರೀಕ್ಷಕ ಹಲ್ಲೆ ನಡೆಸಿ ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿ ಮೆಸ್ಕಾಂ ನೌಕರರು ಪ್ರತಿಭಟನೆ ನಡೆಸಿದ್ದಾರೆ.
ವಿಚಾರಣೆಗಾಗಿ ಪೋಲಿಸ್ ಠಾಣೆಗೆ ಹೋದ ಸಂದರ್ಭದಲ್ಲಿ ಗ್ರಾಮಾಂತರ ಪೊಲೀಸ್ ನಿರೀಕ್ಷಕ ಜಗದೀಶ್ ಹಂಚಿನಾಳ್ ಅವಾಚ್ಯ ಪದಗಳಿಂದ ನಿಂದಿಸಿ ಮೆಸ್ಕಾಂ ಲೈನ್ ಮೆನ್ ಜಿ.ಪಿ. ಚೆನ್ನೇಶ್ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗಿದೆ.
ಮೆಸ್ಕಾಂ ಕಚೇರಿ ಆವರಣದಲ್ಲಿ ಒಟ್ಟುಗೂಡಿದ ಮೆಸ್ಕಾಂ ನೌಕರರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಗೆ ಸ್ಪಂದಿಸಿದ ಅಧಿಕಾರಿಗಳು ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪೊಲೀಸ್ ನಿರೀಕ್ಷಕ ಜಗದೀಶ್ ಹಂಚಿನಾಳ್ ವಿರುದ್ಧ ದೂರು ದಾಖಲಿಸಿದ್ದಾರೆ.
ಭದ್ರಾವತಿ ತಾಲೂಕಿನ ಗೋಣಿಬೀಡು ಗ್ರಾಮದ 11 ಕೆವಿ ಮಾರ್ಗದ ಕೆಳಗೆ ಅಡಿಕೆ ಗಿಡಗಳನ್ನು ಬೆಳೆದಿದ್ದು ಅವುಗಳ ಗರಿ ತೆರವುಗೊಳಿಸುವಂತೆ ಏಪ್ರಿಲ್ 24ರಂದು ಲೈನ್ ಮೆನ್ ಚೆನ್ನೇಶ್ ಅವರು ಅಡಿಕೆ ತೋಟದ ಮಾಲಿಕರ ಪುತ್ರ ರಘು ಎಂಬಾತನಿಗೆ ತಿಳಿಸಿದ್ದಾರೆ. ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದ ರಘು ಗ್ರಾಮಾಂತರ ಠಾಣೆಯಲ್ಲಿ ಚೆನ್ನೇಶ್ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಿಸಿದ್ದಾನೆ. ಈ ಪ್ರಕರಣದ ವಿಚಾರಣೆಗಾಗಿ ಠಾಣೆಗೆ ಹೋಗಿದ್ದ ಸಂದರ್ಭದಲ್ಲಿ ಚೆನ್ನೇಶ್ ಅವರ ಮೇಲೆ ಸಿಪಿಐ ಜಗದೀಶ್ ಹಂಚಿನಾಳ ನಿಂದಿಸಿ ಹಲ್ಲೆ ಮಾಡಿದ್ದಾರೆ ಎಂದು ಮೆಸ್ಕಾಂ ಸಹಾಯಕ ಇಂಜಿನಿಯರ್ ಕಿರಣ್ ಕುಮಾರ್ ನ್ಯೂಟೌನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.