ಹೈದರಾಬಾದ್: ಮಿಚಾಂಗ್ ಚಂಡಮಾರುತದ ಅವಾಂತರಕ್ಕೆ ಆಂಧ್ರಪ್ರದೇಶ ಹಾಗೂ ತಮಿಳುನಾಡಿನಲ್ಲಿ ಈವರೆಗೆ 12 ಜನರು ಬಲಿಯಾಗಿದ್ದಾರೆ.
ಬಿರುಗಾಳಿ ಸಹಿತ ಧಾರಾಕಾರ ಮಳೆಗೆ ತಮಿಳುನಾಡಿನ ಹಲವು ಪ್ರದೇಶಗಳು ಜಲಾವೃತಗೊಂಡಿದ್ದು, ಕಡಲಿನಲ್ಲಿ ರಕ್ಕಸ ಅಲೆಗಳು ಏಳುತ್ತಿವೆ. ಮಳೆ, ಬಿರುಗಾಳಿ ಅಬ್ಬರಕ್ಕೆ ವಿದ್ಯುತ್ ಕಂಬಗಳು ಉರುಳಿ ಬಿದ್ದಿದ್ದು, ಬೃಹತ್ ಮರಗಳು ಧರಾಶಾಹಿಯಾಗಿವೆ. ಮನೆ, ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ, ಮೆಟ್ರೋ ಸ್ಟೇಷನ್ ಗಳಿಗೂ ನೀರು ನುಗ್ಗಿ ಅವಾಂತರಗಳು ಸೃಷ್ಟಿಯಾಗಿವೆ.
ಬಿರುಗಾಳಿಗೆ ವಿದ್ಯುತ್ ತಂತಿ ತುಂಡಾಗಿದ್ದು, ಕಳೆದ ಎರಡು ದಿನಗಳಿಂದ ಚೆನ್ನೈ ನಗರದಲ್ಲಿ ವಿದ್ಯುತ್ ಕಡಿತಗೊಂಡಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ.
ಆಂಧ್ರಪ್ರದೇಶದ ಬಾಪ್ಟಾಲ ಕರಾವಳಿ ತೀರಕ್ಕೆ ಚಂಡಮಾರುತ ಅಪ್ಪಳಿಸಿದ್ದು, ಗಂಟೆಗೆ 110 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದೆ. ಆಂಧ್ರ ಕರಾವಳಿ ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದ್ದು, 8 ಜಿಲ್ಲೆಗಳಲ್ಲಿ ಕಟ್ಟೆಚ್ಚರ ಘೋಷಿಸಲಾಗಿದೆ. ವರುಣಾರ್ಭಟಕ್ಕೆ ಮನೆ ಗೋಡೆ ಕುಸಿದು ಬಿದ್ದ ಪರಿಣಾಮ ತಿರುಪತಿಯಲ್ಲಿ ನಾಲ್ಕು ವರ್ಷದ ಬಾಲಕ ಸಾವನ್ನಪ್ಪಿದ್ದಾನೆ.
ಮಿಚಾಂಗ್ ಚಂಡಮಾರುತಕ್ಕೆ ತಮಿಳುನಾಡು ಹಾಗೂ ಆಂಧ್ರಪ್ರದೇಶದಲ್ಲಿ ಈವರೆಗೆ 12 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಭಾರಿ ಮಳೆ, ಬಿರುಗಾಳಿಯಿಂದಾಗಿ ಅನಾಹುತಗಳು ಸೃಷ್ಟಿಯಾಗುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಆಂಧ್ರದಲ್ಲಿ 140 ರೈಲು ಸಂಚಾರ ರದ್ದುಪಡಿಸಲಾಗಿದೆ. ಅಲ್ಲದೇ 40 ವಿಮಾನಗಳ ಹಾರಾಟವನ್ನು ರದ್ದು ಮಾಡಲಾಗಿದೆ.