ಬೆಂಗಳೂರು: ರಾಜ್ಯದ ಸರ್ಕಾರಿ, ಅನುದಾನಿತ ಶಾಲೆಗಳ ಒಂದರಿಂದ 10ನೇ ತರಗತಿ ಮಕ್ಕಳಿಗೆ ವಾರದಲ್ಲಿ ಮೂರು ದಿನ ರಾಗಿ ಹೆಲ್ತ್ ಮಿಕ್ಸ್ ವಿತರಿಸಲಾಗುವುದು.
ಅಪೌಷ್ಟಿಕತೆ ನಿವಾರಣೆ ಉದ್ದೇಶದಿಂದ ವಿತರಿಸಲಾಗುತ್ತಿರುವ ಬಿಸಿ ಹಾಲಿನೊಂದಿಗೆ ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ವತಿಯಿಂದ ಉಚಿತವಾಗಿ ನೀಡುತ್ತಿರುವ ಸಾಯಿ ಶ್ಯೂರ್ ರಾಗಿ ಹೆಲ್ತ್ ಮಿಕ್ಸ್ ನೀಡಲಾಗುತ್ತಿದೆ. ಈಗಾಗಲೇ ಸಂಸ್ಥೆ ಬೇರೆ ರಾಜ್ಯಗಳಲ್ಲಿ ಇದನ್ನು ವಿತರಿಸುತ್ತಿದ್ದು, ರಾಜ್ಯದ 34 ಶೈಕ್ಷಣಿಕ ಜಿಲ್ಲೆಗಳ 53,619 ಪ್ರಾಥಮಿಕ, ಪ್ರೌಢಶಾಲೆಗಳ 55,55,952 ವಿದ್ಯಾರ್ಥಿಗಳಿಗೆ ವಿತರಿಸಲಾಗುವುದು.
ಶಾಲೆಗಳಲ್ಲಿ ಸೋಮವಾರ, ಬುಧವಾರ, ಶುಕ್ರವಾರ ಕ್ಷೀರ ಭಾಗ್ಯ ಯೋಜನೆಯ 150 ಮಿ.ಲೀ. ಬಿಸಿ ಹಾಲಿನಲ್ಲಿ ಮಿಶ್ರಣ ಮಾಡಿ ಕುದಿಸಿ ನೀಡಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರವರಿ 22ರಂದು ಬೆಂಗಳೂರಿನಲ್ಲಿ ಯೋಜನೆಗೆ ಚಾಲನೆ ನೀಡಲಿದ್ದು, ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳ ಆಯ್ದ ಶಾಲೆಗಳಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ಮಾರ್ಚ್ 31ರೊಳಗೆ ರಾಜ್ಯಾದ್ಯಂತ ಇದನ್ನು ವಿಸ್ತರಿಸಲಾಗುವುದು ಎಂದು ಹೇಳಲಾಗಿದೆ.