ಬೆಂಗಳೂರು: ಗಣಿತ, ತಂತ್ರಜ್ಞಾನ, ವಿಜ್ಞಾನ ಸೇರಿದಂತೆ ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ ಇನ್ಫೋಸಿಸ್ ಫೌಂಡೇಷನ್ ವತಿಯಿಂದ ನೀಡುವ ಪ್ರತಿಷ್ಠಿತ ಇನ್ಫೋಸಿಸ್ ಪ್ರಶಸ್ತಿಯ ಕನಿಷ್ಠ ವಯೋಮಿತಿಯನ್ನು 50 ರಿಂದ 40 ವರ್ಷಕ್ಕೆ ಇಳಿಕೆ ಮಾಡಲಾಗಿದೆ ಎಂದು ಇನ್ಫೋಸಿಸ್ ಫೌಂಡೇಷನ್ ಟ್ರಸ್ಟಿ ಎನ್.ಆರ್. ನಾರಾಯಣಮೂರ್ತಿ ಹೇಳಿದ್ದಾರೆ.
ಬೆಂಗಳೂರಿನ ಇನ್ಫೋಸಿಸ್ ಸೈನ್ಸ್ ಫೌಂಡೇಷನ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಇನ್ಫೋಸಿಸ್ ಫೌಂಡೇಶನ್ ಪ್ರಶಸ್ತಿ ಕನಿಷ್ಠ ವಯಸ್ಸಿನ ಮಿತಿಯನ್ನು 40 ವರ್ಷಕ್ಕೆ ಇಳಿಕೆ ಮಾಡಲಾಗಿದೆ. ಈ ಮೂಲಕ ಇನ್ಫೋಸಿಸ್ ಪ್ರಶಸ್ತಿಗೆ ಹೊಸ ದಿಕ್ಕು ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಫೌಂಡೇಶನ್ ಅಧ್ಯಕ್ಷ ಕ್ರಿಸ್ ಗೋಪಾಲಕೃಷ್ಣ ಮಾತನಾಡಿ, ಈ ವರ್ಷ ಪ್ರಶಸ್ತಿಗೆ ನವೆಂಬರ್ ನಿಂದ ಆಯ್ಕೆ ಪ್ರಕ್ರಿಯೆ ಆರಂಭವಾಗಲಿದ್ದು, 2025ರ ಜನವರಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಇಂಜಿನಿಯರಿಂಗ್, ಕಂಪ್ಯೂಟರ್ ವಿಜ್ಞಾನ, ಅರ್ಥಶಾಸ್ತ್ರ, ಮಾನವಿಕ ಮತ್ತು ಸಮಾಜ ವಿಜ್ಞಾನ, ಜೀವವಿಜ್ಞಾನ, ಗಣಿತ, ಭೌತವಿಜ್ಞಾನ ವಿಭಾಗಗಳಲ್ಲಿ ಪ್ರಶಸ್ತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.