ಬೆಂಗಳೂರು: ಕಂದಾಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಸಹಾಯಕರ ಮಿತ ವೇತನವನ್ನು ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಮಾಸಿಕ 2,000 ರೂ. ಹೆಚ್ಚಳ ಮಾಡುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಕಂದಾಯ ಇಲಾಖೆಯಲ್ಲಿ 10,450 ಗ್ರಾಮ ಸಹಾಯಕರ ಹುದ್ದೆಗಳನ್ನು ಮಿತ ವೇತನದ ಆಧಾರದ ಮೇಲೆ ತಾತ್ಕಾಲಿಕವಾಗಿ ಮಂಜೂರು ಮಾಡಿದ್ದು, ಸದ್ಯ 9903 ಗ್ರಾಮ ಸಹಾಯಕರ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ಮಾಸಿಕ ಮಿತ ವೇತನವನ್ನು 13,000 ದಿಂದ 15,000 ರೂ.ಗೆ ಹೆಚ್ಚಳ ಮಾಡಲು ಹಣಕಾಸು ಇಲಾಖೆ ಸಮ್ಮತಿಸಿದೆ.
ಸೇವಾ ನಿಯಮಾವಳಿ ರೂಪಿಸಿ ಸೇವಾ ಭದ್ರತೆ ನೀಡುವ ಬಗ್ಗೆ ಪರಿಶೀಲನೆ ನಡೆಯುತ್ತಿದೆ. ಗ್ರಾಮ ಸಹಾಯಕರನ್ನು ಡಿ ದರ್ಜೆ ನೌಕರರು ಎಂದು ಪರಿಗಣಿಸುವ ಪ್ರಸ್ತಾವನೆಯನ್ನು ಸದ್ಯಕ್ಕೆ ಪರಿಗಣಿಸಲು ಸಾಧ್ಯವಿಲ್ಲ ಎಂದು ಹಣಕಾಸು ಇಲಾಖೆ ತಿಳಿಸಿದೆ ಎಂದು ಹೇಳಿದ್ದಾರೆ. ವೇತನ ಹೆಚ್ಚಳ ಬೇಡಿಕೆ ಈಡೇರಿದ ಹಿನ್ನೆಲೆಯಲ್ಲಿ ಗ್ರಾಮ ಸಹಾಯಕರು ಪ್ರತಿಭಟನೆ ಹಿಂಪಡೆದುಕೊಂಡಿದ್ದಾರೆ.