ಕಲಬುರಗಿ: ಗಣಿ ಇಲಾಖೆಯ ಸಿಬ್ಬಂದಿ ಅಧಿಕಾರಿಗಳಿಗೆ ಸಮವಸ್ತ್ರ ವಾಕಿ ಟಾಕಿ ಸೇರಿದಂತೆ ಅತ್ಯಾಧುನಿಕ ಸಾಧನಗಳ ವ್ಯವಸ್ಥೆ ಮಾಡಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.
ಕಲ್ಬುರ್ಗಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ಅವಘಡ ಸಂಭವಿಸದಂತೆ ಸಿಬ್ಬಂದಿಗೆ ತರಬೇತಿ ನೀಡಲಾಗುವುದು. ಸ್ಪೋಟಕ ವಸ್ತುಗಳ ಸಾಗಾಟ, ಸಂಗ್ರಹಣೆಯ ಬಗ್ಗೆ ತರಬೇತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಉಚಿತ ಮರಳು ನೀತಿ ಜಾರಿಗೆ ತರಲು ನಿರ್ಧರಿಸಲಾಗಿದೆ. 10 ಲಕ್ಷ ರೂಪಾಯಿಯವರೆಗೆ ಒಂದು ದರ ನಿಗದಿ ಮಾಡಲಾಗುವುದು, 10 ಲಕ್ಷ ರೂಪಾಯಿ ಮೇಲ್ಪಟ್ಟ ಕಟ್ಟಡಕ್ಕೆ ಮತ್ತೊಂದು ದರ ನಿಗದಿ ಮಾಡಲಾಗುವುದು. ಶೀಘ್ರದಲ್ಲೇ ಹೊಸ ಮರಳು ನೀತಿ ತರಲಾಗುವುದು ಎಂದು ಹೇಳಿದ್ದಾರೆ.
ಅಕ್ರಮ ಮರಳು ಸಾಗಾಟದ ಬಗ್ಗೆ ನನ್ನ ಗಮನಕ್ಕೆ ಬಂದಿದೆ. ಅಕ್ರಮ ಗಣಿಗಾರಿಕೆ ಹಿನ್ನೆಲೆಯಲ್ಲಿ ಆರು ಸಾವಿರ ಕೋಟಿ ರೂಪಾಯಿ ದಂಡ ಹಾಕಲಾಗಿದೆ. ಇದರಲ್ಲಿಯೂ ಅಕ್ರಮ ನಡೆದಿರುವುದು ಗೊತ್ತಾಗಿದ್ದು, ಅಕ್ರಮ ಗಣಿಗಾರಿಕೆ ತಡೆಗೆ ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.